ದೊಡ್ಡಬಳ್ಳಾಪುರ(ಬೆಂ.ಗ್ರಾಮಾಂತರ): ಹೆಂಡತಿ ಜೊತೆ ವಿಡಿಯೋ ಕಾಲ್ನಲ್ಲಿ ಮಾತನಾಡುತ್ತಿರುವಾಗಲೇ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಕೆಎಸ್ಆರ್ಟಿಸಿ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಮೇಲ್ಸೇತುವೆ ಬಳಿ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ಅಮರೇಶ್ ಹಿರೇಮಠ (40) ಎಂದು ಗುರುತಿಸಲಾಗಿದೆ.
ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ನಿವಾಸಿಯಾಗಿದ್ದು, ಕೆಎಸ್ಆರ್ಟಿಸಿ ಸಂಸ್ಥೆಯ ದೊಡ್ಡಬಳ್ಳಾಪುರ ಘಟಕದಲ್ಲಿ ಚಾಲಕ ಕಮ್ ನಿರ್ವಾಹಕರಾಗಿ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ನಗರದ ರೋಜಿಪುರದಲ್ಲಿ ಇವರ ಕುಟುಂಬ ವಾಸವಾಗಿತ್ತು.
ಗಂಡ-ಹೆಂಡತಿ ನಡುವೆ ಜಗಳವಿದ್ದು, ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇಂದು ಬೆಳಗ್ಗೆ ತಿಂಡಿ ವಿಚಾರಕ್ಕೆ ಇಬ್ಬರ ನಡುವೆ ಜಗಳವಾಗಿದ್ದು, ನಂತರ ರೈಲ್ವೆ ಟ್ರ್ಯಾಕ್ ಬಳಿಗೆ ಬಂದ ಆತ ಹೆಂಡತಿಗೆ ವಿಡಿಯೋ ಕಾಲ್ ಮಾಡಿ ತಾನು ಸಾಯುತ್ತಿರುವುದ್ದಾಗಿ ಹೇಳುತ್ತಲೇ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.