ದೊಡ್ಡಬಳ್ಳಾಪುರ: ಕಡಿಮೆ ಜನಸಂಖ್ಯೆಯಲ್ಲಿ ಸಾರ್ವಜನಿಕ ಗಣೇಶ ಹಬ್ಬ ಆಚರಿಸಲು ಸಂಘ ಸಂಸ್ಥೆಗಳು ಮತ್ತು ಇಲಾಖೆಯ ಮುಖಂಡರೊಂದಿಗೆ ಚರ್ಚಿಸಿ ಸರ್ಕಾರ ತಿರ್ಮಾನ ಮಾಡಲಿದೆ ಎಂದು ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.
ಸೆಪ್ಟೆಂಬರ್ 3 ರಂದು ನಡೆಯುವ ದೊಡ್ಡಬಳ್ಳಾಪುರ ನಗರಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಪೌರಾಡಳಿತ ಸಚಿವ ಎಂಟಿಬಿ ದೊಡ್ಡಬಳ್ಳಾಪುರ ನಗರಕ್ಕೆ ಆಗಮಿಸಿದ್ದರು.
ಈ ವೇಳೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯ ಪ್ರವಾಸ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಕೇಂದ್ರ ಮತ್ತು ರಾಜ್ಯ ನಾಯಕರು ಎಲ್ಲರೂ ಒಗ್ಗಟ್ಟಾಗಿ ಬಸವರಾಜ ಬೊಮ್ಮಾಯಿಯವರನ್ನ ಮುಖ್ಯಮಂತ್ರಿಯಾಗಿ ಬಹುಮತದಿಂದ ಆಯ್ಕೆ ಮಾಡಿದ್ದಾರೆ. ಇದರ ಬಗ್ಗೆ ನಮಗೆ ಯಾವುದೇ ಭಿನ್ನಾಭಿಪ್ರಾಯ, ಅಸಮಾಧಾನ, ಗುಂಪುಗಾರಿಕೆ ಇಲ್ಲ. ಎಲ್ಲರೂ ಒಗ್ಗಟ್ಟಾಗಿದ್ದೇವೆ, ಮುಂದಿನ ಎರಡು ವರ್ಷ ಎಲ್ಲರೂ ಒಗ್ಗಟ್ಟಾಗಿ ಸರ್ಕಾರ ನಡೆಸಲಿದ್ದೇವೆ. 2023ರ ಸಾರ್ವತಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುತ್ತೇವೆ ಎಂದರು.
ಸಾರ್ವಜನಿಕ ಗಣೇಶ ಹಬ್ಬಕ್ಕೆ ಅನುಮತಿ ನೀಡುವ ಬಗ್ಗೆ ಮಾತನಾಡಿದ ಸಚಿವರು, ತಜ್ಞರು ಹಾಗೂ ಕೆಲವು ಸಚಿವರನ್ನು ಕರೆದು ಸಿಎಂ ಸಭೆ ಮಾಡುತ್ತಿದ್ದಾರೆ. ಸರ್ಕಾರ ಈಗಾಗಲೇ ಕೆಲ ಮಾನದಂಡಗಳನ್ನು ಹೊರಡಿಸಿದೆ. ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸುವ ಮೂಲಕ ಯಾವುದೇ ಹಬ್ಬ ಹರಿದಿನ ಆಚರಿಸಲು ಸರ್ಕಾರ ಸೂಚಿಸಿದ ಮಾರ್ಗಸೂಚಿಯನ್ನು ಪಾಲನೆ ಮಾಡಬೇಕು ಎಂದು ಹೇಳಿದ್ರು.
ಇದನ್ನೂ ಓದಿ:ಗೌರಿ ಗಣೇಶ ಹಬ್ಬಕ್ಕೆ ಅನುಮತಿ ಕುರಿತು ಸಿಎಂ ತೀರ್ಮಾನ ಕೈಗೊಳ್ತಾರೆ: ಸಚಿವ ಪ್ರಭು ಚೌಹಾಣ್