ಬೆಂಗಳೂರು: ಸಚಿವ ಆರ್ ಅಶೋಕ್ ಬಳಿ ಇದ್ದ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವ ಸ್ಥಾನವನ್ನು ಸಚಿವ ಎಂಟಿಬಿ ನಾಗರಾಜ್ಗೆ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಪೌರಾಡಳಿತ ಮತ್ತು ಸಕ್ಕರೆ ಸಚಿವ ಎಂಡಿಬಿ ನಾಗರಾಜ್ಗೆ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ನೀಡುವ ಮೂಲಕ ಸಿಎಂ ಯಡಿಯೂರಪ್ಪ ಅಸಮಾಧಾನ ತಣಿಸಿದ್ದಾರೆ.
ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಂಟಿಬಿ ಸೋಲನುಭವಿಸಿದ್ದರು. ಬಳಿಕ ವಿಧಾನಪರಿಷತ್ ಸದಸ್ಯ ಸ್ಥಾನ ನೀಡಲಾಗಿತ್ತು. ಸಚಿವ ಸ್ಥಾನ ಸಿಕ್ಕ ಬಳಿಕ ನೀಡಿದ್ದ ಅಬಕಾರಿ ಖಾತೆಗೆ ಎಂಟಿಬಿ ವಿರೋಧ ವ್ಯಕ್ತಪಡಿಸಿದ್ದರು. ಬದಲಾಗಿ ವಸತಿ ಖಾತೆಗೆ ಬೇಡಿಕೆ ಇಟ್ಟಿದ್ದರು. ಆದರೆ ಸಕ್ಕರೆ ಹಾಗೂ ಪೌರಾಡಳಿತ ಖಾತೆ ನೀಡಲಾಯಿತು.
ಆದರೆ, ಇದರಿಂದ ಸಮಾಧಾನಗೊಳ್ಳದ ಎಂಟಿಬಿ ಸಿಎಂ ವಿರುದ್ಧ ಮುನಿಸಿಕೊಂಡಿದ್ದರು ಎನ್ನಲಾಗಿತ್ತು. ಇದೀಗ ಎಂಟಿಬಿ ನಾಗರಾಜ್ ಅವರಿಗೆ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವ ಸ್ಥಾನ ನೀಡಲಾಗಿದೆ.
ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವ ಸ್ಥಾನ ನೀಡಬೇಕು ಎಂಬ ಬೇಡಿಕೆಯನ್ನು ಸಿಎಂ ಮುಂದೆ ಎಂಟಿಬಿ ಇಟ್ಟಿದ್ದರು ಎಂದು ಹೇಳಲಾಗಿತ್ತು. ಹೊಸಕೋಟೆಯಲ್ಲಿ ನಡೆಯುತ್ತಿದ್ದ ಸರ್ಕಾರಿ ಕಾರ್ಯಕ್ರಮಗಳಿಗೂ ಎಂಟಿಬಿಗೆ ಆಹ್ವಾನ ಸಿಗುತ್ತಿರಲಿಲ್ಲ. ಇದಕ್ಕೆ ಕಾಂಗ್ರೆಸ್ ಶಾಸಕ ಶರತ್ ಬಚ್ಚೇಗೌಡ ಕಾರಣ ಎಂಬ ಆಕ್ರೋಶವೂ ಎಂಟಿಬಿಗೆ ಇತ್ತು. ಈ ನಿಟ್ಟಿನಲ್ಲಿ ಸಿಎಂ ಮನೆಗೆ ಹೋಗಿ ಉಸ್ತುವಾರಿ ಕೊಡಿ ಎಂದು ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.