ದೇವನಹಳ್ಳಿ : ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಿಗದೆ ಕೊವೀಡ್ ಸೋಂಕಿತರ ಸಾವಿನ ಪ್ರಮಾಣ ಹೆಚ್ಚಾಗುತ್ತಿದೆ. ಹಾಗಾಗಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆಕ್ಸಿಜನ್ ಬದಲಿಗೆ ಆಕ್ಸಿಜನ್ ಕಾನ್ಸನ್ಟ್ರೇಟರ್ಗಳನ್ನು ವಿತರಣೆ ಮಾಡಲಾಗಿದ್ದು, ಇದು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ವರವಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದರು.
ದೇವನಹಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕು ಕೋವಿಡ್ ಕೇರ್ ಸೆಂಟರ್ಗಳಿಗೆ ಆಕ್ಸಿಜನ್ ಕಾನ್ಸನ್ಟ್ರೇಟರ್ಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ ಮಾತನಾಡಿದ ಅವರು, ಅಮೆರಿಕಾದಿಂದ 160 ಆಕ್ಸಿಜನ್ ಕಾನ್ಸನ್ಟ್ರೇಟರ್ಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ತರಿಸಲಾಗಿದ್ದು, ಪ್ರತಿ ತಾಲೂಕಿಗೆ 40ರಂತೆ ವಿತರಣೆ ಮಾಡಲಾಗುವುದು ಎಂದರು.
ಆಕ್ಸಿಜನ್ ಕಾನ್ಸನ್ಟ್ರೇಟರ್ ಆಕ್ಸಿಜನ್ಗೆ ಪರ್ಯಾಯವಾಗಿ ಕೆಲಸ ಮಾಡಲಿದ್ದು, ಇವುಗಳನ್ನು ಕೋವಿಡ್ ಕೇರ್ ಸೆಂಟರ್ನಲ್ಲಿ ಇಡಲಾಗುವುದು, ಇದರಿಂದ ಆಸ್ಪತ್ರೆಗಳ ಮೇಲಿನ ಹೊರೆ ಕಡಿಮೆಯಾಗಲಿದೆ, ಅಲ್ಲದೇ ಶೇ.95ರಷ್ಟು ಸಾವು ಕಡಿಮೆ ಮಾಡಬಹುದೆಂದು ಹೇಳಿದರು.
ಲಾಠಿ ಪ್ರಯೋಗ ಮಾಡದಂತೆ ಅಧಿಕಾರಿಗಳಿಗೆ ಸೂಚನೆ
ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸಾರ್ವಜನಿಕರ ಮೇಲೆ ಲಾಠಿ ಪ್ರಯೋಗ ಮಾಡದೇ, ಕಾನೂನು ರೀತಿಯ ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ.
ಜನರು ಅನವಶ್ಯಕವಾಗಿ ಓಡಾಡುವುದನ್ನು ನಿಲ್ಲಿಸಬೇಕು, ಲಾಕ್ಡೌನ್ ಮಾಡಿರುವುದು ಕೊರೊನಾ ನಿಯಂತ್ರಣಕ್ಕಾಗಿ ಎಂಬ ಅರಿವಿರಬೇಕು ಎಂದರು.
ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಡ್-19 ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಸಚಿವ ಆರ್.ಅಶೋಕ್ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.
ಕೋವಿಡ್ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳು ಮಾಡುತ್ತಿರುವ ನಿಸ್ವಾರ್ಥ ಸೇವೆಯನ್ನು ರಾಜ್ಯ ಸರ್ಕಾರವು ಪರಿಗಣಿಸಿ, ಎಲ್ಲಾ ಮಾಧ್ಯಮ ಪ್ರತಿನಿಧಿಗಳನ್ನು ಫ್ರಂಟ್‌ಲೈನ್ ವಾರಿಯರ್ಸ್ ಎಂದು ಘೋಷಿಸಲಾಗಿದೆ.
ಆದ್ಯತೆ ಮೇರೆಗೆ ಕೋವಿಡ್ ಲಸಿಕೆಯನ್ನು ನೀಡಲಾಗುತ್ತಿದೆ. ಮಾಧ್ಯಮ ಪ್ರತಿನಿಧಿಗಳೆಲ್ಲರೂ ಈ ಸೌಲಭ್ಯದ ಉಪಯೋಗವನ್ನು ಪಡೆಯಬೇಕು ಎಂದು ಆರ್ ಅಶೋಕ್ ಕೋರಿದರು.