ನೆಲಮಂಗಲ: ಬೆಂಗಳೂರು ನೆಲಮಂಗಲ ಹತ್ತಿರದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ( ಬಿಐಇಸಿ) ಯಲ್ಲಿ ಫೆ.6ರಂದು ನಡೆಯುವ ಜಿ 20 ಇಂಡಿಯಾ ಎನರ್ಜಿ ವೀಕ್ ಕಾರ್ಯಕ್ರಮದಲ್ಲಿ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಹೀಗಾಗಿ ಬಿಐಇಸಿ ಕೇಂದ್ರದ ಸುತ್ತಲೂ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಧಾನಿ ಅವರ ಆಗಮನದ ಹಿನ್ನೆಲೆ ಎಡಿಜಿಪಿ ಅಲೋಕ್ ಕುಮಾರ್ ಭಾನುವಾರ ಸ್ಥಳಕ್ಕೆ ಭೇಟಿ ನೀಡಿ ಪೊಲೀಸ್ ಬಿಗಿ ಭದ್ರತೆ ವ್ಯವಸ್ಥೆಯನ್ನು ಪರಿಶೀಲಿಸಿದರು.
ಸೋಮವಾರ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಪ್ರಧಾನಿ ಅವರು ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಆಗಮಿಸಲಿದ್ದಾರೆ. ಬಿಐಇಸಿಯಲ್ಲಿ ನಾಲ್ಕು ಹೆಲಿಪ್ಯಾಡ್ ಗಳ ನಿರ್ಮಾಣ ಸಹ ಮಾಡಲಾಗಿದೆ. ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಸೋಮವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ದೇಶ ವಿದೇಶಗಳಿಂದ ಸಾವಿರಾರು ಸಂಖ್ಯೆಯಲ್ಲಿ ಗಣ್ಯರು ಆಗಮಿಸಲಿದ್ದು, ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶವನ್ನು ನಿರಾಕರಿಸಲಾಗಿದೆ. ಪ್ರಧಾನಿ ಅವರು ಬರುತ್ತಿರುವ ಹಿನ್ನೆಲೆ ಮಾರ್ಗಗಳಲ್ಲೂ ಬದಲಾವಣೆ ಮಾಡಲಾಗಿದೆ. ಇದರಿಂದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ವಾಹನಗಳ ದಟ್ಟಣೆ ಉಂಟಾಗಿದೆ. ಕಿಲೋ ಮೀಟರ್ ಗಟ್ಟಲೆ ವಾಹನಗಳು ನಿಂತಿದ್ದು, ಟ್ರಾಫಿಕ್ ಜಾಮ್ ತೆರವು ಮಾಡಲು ಸಂಚಾರಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಪ್ರವಾಸ: ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದಿನದ ರಾಜ್ಯ ಪ್ರವಾಸ ಕೈಗೊಂಡಿದ್ದು, ಬೆಂಗಳೂರು ಮತ್ತು ತುಮಕೂರಿನಲ್ಲಿನ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಸೋಮವಾರ ರಾತ್ರಿಯೇ ದೆಹಲಿಗೆ ವಾಪಸಾಗಲಿದ್ದಾರೆ. ಚುನಾವಣಾ ಮುನ್ನ ಮೋದಿ ಅವರ ಸರಣಿ ರಾಜ್ಯ ಭೇಟಿ ರಾಜ್ಯ ಬಿಜೆಪಿಗೆ ಬೂಸ್ಟರ್ ಡೋಸ್ ನಂತಾಗಿದೆ.
ಪ್ರಧಾನಿ ಕಾರ್ಯಕ್ರಮದ ವಿವರ: ಸೋಮವಾರ ಬೆಳಗ್ಗೆ 8.20ಕ್ಕೆ ವಾಯುಪಡೆ ವಿಮಾನದಲ್ಲಿ ನವದೆಹಲಿಯಿಂದ ಪ್ರಯಾಣಿಸಲಿರುವ ಪ್ರಧಾನಿ ನರೇಂದ್ರ ಮೋದಿ 10.55ಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬೆ. 11.20ಕ್ಕೆ ಗಂಟೆಗೆ ಹೆಲಿಕಾಪ್ಟರ್ ಮೂಲಕ ಹೊರಟು 11.25ಕ್ಕೆ ತುಮಕೂರು ರಸ್ತೆಯಲ್ಲಿರುವ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದ ಹೆಲಿಪ್ಯಾಡ್ ತಲುಪಲಿದ್ದಾರೆ. 11.30ಕ್ಕೆ ಇಂಧನ ಸಪ್ತಾಹ ಉದ್ಘಾಟಿಸಿ 2.30ರ ವರೆಗೂ ಇಂಡಿಯಾ ಎಜೆರ್ಜಿ ವೀಕ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
2.40ಕ್ಕೆ ಹೆಲಿಕಾಪ್ಟರ್ ಮೂಲಕ ಪ್ರಯಾಣಿಸಲಿರುವ ನರೇಂದ್ರ ಮೋದಿ 3.25ಕ್ಕೆ ತುಮಕೂರು ತಲುಪಲಿದ್ದಾರೆ. 3.30ಕ್ಕೆ ರಕ್ಷಣಾ ವಲಯದಲ್ಲಿ ಸ್ವಾವಲಂಬನೆ ಸಾಧಿಸುವ ದೃಷ್ಟಿಯಿಂದ ಹೆಚ್ಎಎಲ್ ಹೆಲಿಕಾಪ್ಟರ್ ಕಾರ್ಖಾನೆಯನ್ನು ಲೋಕಾರ್ಪಣೆ ನೆರವೇರಿಸಲಿದ್ದಾರೆ.ಇದರ ಬಳಿಕ ಪ್ರಧಾನಮಂತ್ರಿ ಅವರು ಚೆನ್ನೈ ಬೆಂಗಳೂರು ಕೈಗಾರಿಕಾ ಕಾರಿಡಾರ್ ನ ಭಾಗವಾದ ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಶಿಲಾನ್ಯಾಸ ನೆರವೇರಿಸುವರು.
ನಂತರ ತುಮಕೂರಿನ ಚಿಕ್ಕನಾಯಕನಹಳ್ಳಿ ಮತ್ತು ತಿಪಟೂರಿನಲ್ಲಿ ಜಲ್ ಜೀವನ್ ಅಭಿಯಾನದ ಯೋಜನೆಗಳಿಗೆ ಪ್ರಧಾನಮಂತ್ರಿ ಅವರು ಶಿಲಾನ್ಯಾಸ ನೆರವೇರಿಸುವರು. 3.30 ರಿಂದ 4.30ರ ವರೆಗೆ ತುಮಕೂರು ಕಾರ್ಯಕ್ರಮದಲ್ಲಿ ಭಾಗವಹಿಸುವರು.ಸಂಜೆ 4.40ಕ್ಕೆ ತುಮಕೂರಿನಿಂದ ಹೆಲಿಕಾಪ್ಟರ್ ಮೂಲಕ ತಮಕೂರಿನಿಂದ ಹೊರಟು ಸಂಜೆ 5.15ಕ್ಕೆ ಬೆಂಗಳೂರು ವಿಮಾನ ನಿಲ್ದಾಣ ತಲುಪುವರು, 5.20ಕ್ಕೆ ವಾಯುಪಡೆ ವಿಮಾನದ ಮೂಲಕ ನವದೆಹಲಿಗೆ ವಾಪಸ್ಸಾಗಲಿದ್ದು, ರಾತ್ರಿ 8 ಗಂಟೆಗೆ ದೆಹಲಿ ತಲುಪಲಿದ್ದಾರೆ.
ಫೆಬ್ರವರಿ 13ರಂದು ಮತ್ತೆ ರಾಜ್ಯಕ್ಕೆ ಪಿಎಂ ಮೋದಿ: ಫೆಬ್ರವರಿ 13 ರಂದು ಮತ್ತೆ ರಾಜ್ಯಕ್ಕೆ ಮೋದಿ ಆಗಮಿಸಲಿದ್ದಾರೆ. ಏಷ್ಯಾದ ಅತಿ ದೊಡ್ಡ ಏರ್ ಶೋ ಆಗಿರುವ ಏರೋ ಇಂಡಿಯಾ 2023 ಕ್ಕೆ ಮೋದಿ ಚಾಲನೆ ನೀಡಲಿದ್ದಾರೆ. ಯಲಹಂಕ ವಾಯುನೆಲೆಯಲ್ಲಿ ನಡೆಯಲಿರುವ ಐದು ದಿನಗಳ ಏರ್ ಶೋಗೆ ಚಾಲನೆ ನೀಡಿದ ನಂತರ ಸಾರ್ವಜನಿಕ ಕಾರ್ಯಕ್ರಮ ಆಯೋಜನೆ ಮಾಡಬೇಕು ಎನ್ನುವ ಚಿಂತನೆ ಪಕ್ಷ ನಡೆಸಿದೆ. ಆದರೆ ಈ ಬಗ್ಗೆ ಇನ್ನು ಅಂತಿಮ ನಿರ್ಧಾರವಾಗಿಲ್ಲ.
ಫೆಬ್ರವರಿ 27 ರಂದು ಮತ್ತೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅಂದು ಪ್ರಧಾನಿ ಮೋದಿ ಅವರು ಶಿವಮೊಗ್ಗಕ್ಕೆ ಆಗಮಿಸಲಿದ್ದು, ರಾಜ್ಯ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನ 27 ರಂದು ಶಿವಮೊಗ್ಗಕ್ಕೆ ಆಗಮಿಸಿ, ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಲಿದ್ದಾರೆ. ಯಡಿಯೂರಪ್ಪ ತವರು ಜಿಲ್ಲೆ ಶಿವಮೊಗ್ಗದಲ್ಲಿ ನಿರ್ಮಾಣಗೊಂಡಿರುವ ನೂತನ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದಾರೆ.
ಇದನ್ನೂಓದಿ:ತಾಲಿಬಾನ್ ಆಡಳಿತದ ಅಫ್ಘಾನಿಸ್ತಾನಕ್ಕೆ ಹಣಕಾಸು ನೆರವು ಏಕೆ?: ಕೇಜ್ರಿವಾಲ್