ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ): ಕರ್ನಾಟಕ ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ ಮತ್ತು ಮುಂದಿನ ದಿನಗಳಲ್ಲಿ ರಾಹುಲ್ ಗಾಂಧಿ ಪ್ರಧಾನಮಂತ್ರಿ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಆಂಧ್ರಪ್ರದೇಶದ ಕಾಂಗ್ರೆಸ್ ನೂತನ ಅಧ್ಯಕ್ಷ ಗಿಡುಗು ರುದ್ರ ರಾಜ್ ಹೇಳಿದರು. ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ತೂಬಗೆರೆ ಹೋಬಳಿಯ ಹೊಸಹಳ್ಳಿ ತಾಂಡ ಸೇರಿದಂತೆ ಹಲವು ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ ಹೆಚ್ ಮುನಿಯಪ್ಪ ಪರ ಅವರು ಇಂದು ಪ್ರಚಾರ ನಡೆಸಿದರು.
ಮುನಿಯಪ್ಪ ಪರವಾಗಿ ಪ್ರಚಾರ ಮಾಡಲು ಆಂಧ್ರಪ್ರದೇಶದ ಕಾಂಗ್ರೆಸ್ ಅಧ್ಯಕ್ಷರಾದ ಗಿಡುಗು ರುಧ್ರ ರಾಜ್, ಕಾರ್ಯಾಧ್ಯಕ್ಷರಾದ ಪದ್ಮಶ್ರೀ, ಮಾಜಿ ಮಂತ್ರಿಗಳಾದ ರಘುವೀರ್ ರೆಡ್ಡಿ ಭಾಗವಹಿಸಿದ್ದರು. ನಂತರ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಗಿಡುಗ ರುದ್ರರಾಜ್, ಮೇ 10 ರಂದು ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿದರುವ 5 ಪ್ರಮುಖ ಗ್ಯಾರೆಂಟಿಗಳಿಗೆ ಪಕ್ಷದ ವರಿಷ್ಠರಾದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಮುಖಂಡರು ಸೇರಿ ಚರ್ಚಿಸಿ ಪರಿಶೀಲಿಸಿದ ಬಳಿಕ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಈ ಐದು ಗ್ಯಾರೆಂಟಿ ಅಂಶಗಳು ಜಾರಿಯಾಗಿ ರಾಜ್ಯ ಅಭಿವೃದ್ಧಿಯತ್ತ ಸಾಗಬೇಕಾದರೇ ರಾಜ್ಯದ ಜನತೆ ಕಾಂಗ್ರೆಸ್ ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಇದನ್ನೂ ಓದಿ: ವ್ಯಾಪಾರಕ್ಕಾಗಿ ಇಲ್ಲಿಗೆ ಬಂದಿಲ್ಲ, ಮನುಷ್ಯನಾಗಿ ಪ್ರಚಾರಕ್ಕೆ ಬಂದಿದ್ದೇನೆ: ನಟ ಶಿವರಾಜ್ ಕುಮಾರ್
ಆಂಧ್ರಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷರಾದ ಪದ್ಮಶ್ರೀ ಮಾತನಾಡಿ, ಇತ್ತೀಚೆಗೆ ಬಿಜೆಪಿ ಸರ್ಕಾರ ಬಂದ ಮೇಲೆ ದೇಶದಲ್ಲಿ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ, ದೌರ್ಜನ್ಯಗಳು ಹೆಚ್ಚುತ್ತಲೇ ಇವೆ. ಸದ್ಯದ ಪರಿಸ್ಥಿತಿಯಲ್ಲಿ ಹೆಣ್ಣು ಮಕ್ಕಳನ್ನು ಮನೆಯಿಂದ ಹೊರಗೆ ಕಳಿಸಲು ಆಗದಂತ ಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ. ಬಿಜೆಪಿವರು ಎಲ್ಲರೂ ಭ್ರಷ್ಟಾಚಾರಿಗಳು, ರಾಜ್ಯದಲ್ಲಿ ಈ ಬಾರಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಬೇಕು, ಕಾಂಗ್ರೆಸ್ ರಾಜ್ಯದಲ್ಲಿ 140 ಕ್ಷೇತ್ರಗಳಲ್ಲಿ ಜಯಗಳಿಸಲಿದ್ದು ಈ ಬಾರಿ ಅಧಿಕಾರಕ್ಕೇರುವುದು ನಿಶ್ಚಿತ. ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕೆ. ಹೆಚ್. ಮುನಿಯಪ್ಪ ಅವರನ್ನು ಗೆಲ್ಲಿಸುವ ಮೂಲಕ ರಾಹುಲ್ ಗಾಂಧಿ ಕೈ ಬಲಪಡಿಸಬೇಕು ಎಂದು ಮತಯಾಚಿಸಿದರು.
ಇದನ್ನೂ ಓದಿ: ಹನುಮಂತನ ನಾಡಿನಲ್ಲಿ ಬಜರಂಗದಳ ನಿಷೇಧಿಸಲು ಕಾಂಗ್ರೆಸ್ ಯತ್ನ: ಯೋಗಿ ಆದಿತ್ಯನಾಥ್ ವಾಗ್ದಾಳಿ
ರಾಜ್ಯಕ್ಕೆ ಆಗಮಿಸಿದ ಸೋನಿಯಾ ಗಾಂಧಿ: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಹುಬ್ಬಳ್ಳಿಯಲ್ಲಿ ನಡೆಯಲಿರುವ ಪ್ರಚಾರ ಸಭೆಗೆ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಅವರು ಇಂದು ರಾಜ್ಯಕ್ಕೆ ಆಗಮಿಸಿದ್ದಾರೆ. ಚುನಾವಣಾ ಬಹಿರಂಗ ಪ್ರಚಾರ ಇನ್ನು ಎರಡು ದಿನ ಬಾಕಿ ಇರುವಾಗಲೇ ಉತ್ತರ ಕರ್ನಾಟಕದ ಮತದಾರರನ್ನು ಸೆಳೆಯಲು ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ.
ಇದನ್ನೂ ಓದಿ: ಖರ್ಗೆ ಕುಟುಂಬವನ್ನು ಕೊಲೆ ಮಾಡುವಂತಹ ತಪ್ಪೇನಾಗಿದೆ: ಪ್ರಿಯಾಂಕ್ ಖರ್ಗೆ ಪ್ರಶ್ನೆ