ದೇವನಹಳ್ಳಿ: ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿ ಮಾಡಲು ಹೊರಟಿರುವ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಸೇರಿದಂತೆ ಹಲವಾರು ಕಾಯ್ದೆಗಳು ದಲಿತ, ರೈತ ಮತ್ತು ಕಾರ್ಮಿಕ ವಿರೋಧಿಯಾಗಿದ್ದು, ಈ ಕೂಡಲೇ ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ನಗರದ ರಾಷ್ಟ್ರೀಯ ಹೆದ್ದಾರಿ 207 ರಲ್ಲಿ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.
ದೊಡ್ಡಬಳ್ಳಾಪುರ ನಗರದ ಡಾ.ರಾಜ್‌ಕುಮಾರ್ ವೃತ್ತದಲ್ಲಿ ಸೇರಿದ ದಲಿತ, ರೈತ ಕಾರ್ಮಿಕ, ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಮತ್ತು ಮುಖಂಡರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ವಾಹನ ಸಂಚಾರಕ್ಕೆ ಅಡಚಣೆಯಾದ್ದರಿಂದ ಸ್ಥಳಕ್ಕೆ ಬಂದ ಪೊಲೀಸರು ಪ್ರತಿಭಟನಾಕಾರರನ್ನು ಬಲವಂತವಾಗಿ ತೆರವುಗೊಳಿಸಲು ಮುಂದಾದರು. ಸಾಧ್ಯವಾಗದಿದ್ದಾಗ ಪ್ರತಿಭಟನಾಕಾರರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದರು.
ನಗರ ಪೊಲೀಸ್ ಠಾಣೆಯ ಮುಂದೆ ಮಾತನಾಡಿದ ಹೋರಾಟಗಾರರು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕೊರೊನಾ ಮಾರಕ ರೋಗವನ್ನು ಮುಂದಿಟ್ಟುಕೊಂಡು ಅಧಿವೇಶನದಲ್ಲಿ ಯಾವುದೇ ಚರ್ಚೆಗೆ ಅವಕಾಶ ನೀಡದೆ ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆಗಳಿಗೆ ಸುಗ್ರೀವಾಜ್ಙೆ ಮೂಲಕ ಜಾರಿ ಮಾಡಲು ಮತ್ತು ವಿದ್ಯುತ್ ಕ್ಷೇತ್ರವನ್ನು ಖಾಸಗಿಯವರಿಗೆ ಮಾರಾಟ ಮಾಡಲು ಹೊರಟಿರುವುದು ದಲಿತ, ರೈತ ಮತ್ತು ಕಾರ್ಮಿಕರಿಗೆ ಮರಣ ಶಾಸನವಾಗಲಿದೆ. ಈ ಕೂಡಲೇ ಈ ಎಲ್ಲಾ ಜನ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.
ದೇವನಹಳ್ಳಿ ತಾಲೂಕಿನ ರೈತ ಮುಖಂಡರು ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 7 ರಲ್ಲಿ ಪ್ರತಿಭಟನೆ ನಡೆಸಿದರು. ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆಯಲ್ಲಿ ತಿದ್ದುಪಡಿ ತರಲು ಹೊರಟ್ಟಿರುವ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.