ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ): ನಗರ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ದೊಡ್ಡಬಳ್ಳಾಪುರ ನಗರದ ತ್ಯಾಗರಾಜನಗರದಲ್ಲಿ ಸೋಮವಾರ ಸಂಜೆ ನಡೆದಿದೆ. ಪ್ರಥಮ ವರ್ಷದ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಜಾನ್ಸಿ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ನಿನ್ನೆ ಕಾಲೇಜಿನಿಂದ ಮನೆಗೆ ಬಂದವಳು, ಮನೆಯಲ್ಲಿ ಯಾರೂ ಇಲ್ಲದ ವೇಳೆ, ಡೆತ್ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಡೆತ್ನೋಟ್ನಲ್ಲಿ "ನಾನು ಯಾರಿಗೂ ಮೋಸ ಮಾಡಿಲ್ಲ, ಮಿಸ್ ಯೂ ಆಲ್ ಫ್ರೆಂಡ್ಸ್, ಬುಜ್ಜಿ ಐ ಮಿಸ್ ಯೂ.. ನಾನು ಇನ್ನೂ ಈ ಲೋಕವನ್ನೇ ಬಿಟ್ಟು ಹೋಗುತ್ತಿದ್ದೇನೆ, ಎಲ್ಲರು ಖುಷಿಯಾಗಿರಿ" ಎಂದು ಬರೆದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ವಿದ್ಯಾರ್ಥಿನಿಯ ತಾಯಿ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗಿ ಮಕ್ಕಳನ್ನು ಕಷ್ಟಪಟ್ಟು ಓದಿಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಮರೇಶ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.
ಪ್ರತ್ಯೇಕ ಪ್ರಕರಣ- ದನದ ಕೊಟ್ಟಿಗೆಯಲ್ಲಿದ್ದ 60 ಸಾವಿರ ಮೌಲ್ಯದ 3 ಮೇಕೆಗಳನ್ನು ಕದ್ದೊಯ್ದ ಕಳ್ಳರು: ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿ ಹಾದ್ರಿಪುರ ಗ್ರಾಮದಲ್ಲಿ ಸೋಮವಾರ ತಡರಾತ್ರಿ ದನದ ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಮೂರು ಮೇಕೆಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.
ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ ಸುಮಾರು 60 ಸಾವಿರ ರೂ. ಮೌಲ್ಯದ ಮೇಕೆಗಳನ್ನು ಕಳವು ಮಾಡಿದ್ದಾರೆ. ರಾತ್ರಿ ದನದ ಕೊಟ್ಟಿಗೆಯಲ್ಲಿ ಜಾನುವಾರು ಸಮೇತ ಮೇಕೆಗಳನ್ನು ಕಟ್ಟಿಹಾಕಲಾಗಿತ್ತು. ಮಂಗಳವಾರ ಬೆಳಗ್ಗೆ ಜಾನುವಾರುಗಳನ್ನು ಹೊರಗೆ ಕಟ್ಟಿಹಾಕಲು ಹೋದಾಗ ಕೊಟ್ಟಿಗೆಯ ಬಾಗಿಲ ಬೀಗ ಮುರಿದು ಎರಡು ಹೆಣ್ಣು ಮೇಕೆ, ಒಂದು ಗಂಡು ಮೇಕೆ ಕದ್ದೊಯ್ದಿರುವುದು ಕಂಡು ಬಂದಿದೆ.
ಮೇಕೆ ಕಳ್ಳತನ ಕುರಿತು ಪೊಲೀಸರಿಗೆ ದೂರು ನೀಡಿದ್ದು, ಗ್ರಾಮಕ್ಕೆ ದೊಡ್ಡಬೆಳವಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ತಾಲೂಕಿನ ಹಲವು ಗ್ರಾಮಗಳಲ್ಲಿ ಜಾನುವಾರು ಕಳ್ಳತನದಿಂದ ರೈತರು ಕಂಗಾಲಾಗಿದ್ದಾರೆ. ಒಂದು ಕಡೆ ಚಿರತೆ ಕಾಟ, ಮತ್ತೊಂದು ಕಡೆ ಜಾನುವಾರು ಕಳ್ಳರ ಕಾಟದಿಂದ ರೈತಾಪಿ ಜನರ ಬದುಕು ಅತಂತ್ರವಾಗಿದೆ. ಜಾನುವಾರು ಕಳ್ಳರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ರೈತರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಬೆಳಗಾವಿ: ಮದುವೆ ಮಂಟಪದಲ್ಲಿ ಮಹಿಳೆಯ ವ್ಯಾನಿಟಿ ಬ್ಯಾಗ್ ಕದ್ದ ಆರೋಪಿ ಸೆರೆ