ದೇವನಹಳ್ಳಿ: ಕೊರೊನಾ ಸೋಂಕಿನಿಂದ ಗುಣಮುಖರಾದವರಲ್ಲಿ ಕ್ಷಯ ರೋಗದ ಲಕ್ಷಣಗಳು ಕಂಡು ಬರುತ್ತಿವೆ. ರಾಜ್ಯಾದ್ಯಂತ ಇಂತಹ 23 ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.
ದೇವನಹಳ್ಳಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲನಾ ಸಭೆ ನೇತೃತ್ವವಹಿಸಿ ಅವರು ಮಾತನಾಡಿದರು.
ಕೋವಿಡ್ ಸೋಂಕು ದೃಢಪಟ್ಟ ವ್ಯಕ್ತಿಗಳ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸುವುದರಿಂದ ಸೋಂಕು ಮತ್ತಷ್ಟು ಉಲ್ಬಣಗೊಳ್ಳದಂತೆ ತಡೆಯಬಹುದು. ರಾಜ್ಯದಲ್ಲಿ ಕೋವಿಡ್ನಿಂದ ಗುಣಮುಖರಾದವರ ಪೈಕಿ 23 ಮಂದಿಯಲ್ಲಿ ಕ್ಷಯ ರೋಗ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಕೋವಿಡ್ನಿಂದ ಗುಣಮುಖರಾಗಿರುವ 60,121 ಮಂದಿಗೂ ಕ್ಷಯ ರೋಗ ಪರೀಕ್ಷೆ ಮಾಡಿಸುವುದರಿಂದ ರೋಗ ನಿಯಂತ್ರಿಸಬಹುದು ಎಂದು ಸಚಿವರು ಹೇಳಿದರು.
ಜಿಲ್ಲೆಯಲ್ಲಿ ನಿಗದಿಪಡಿಸಿರುವ ಗುರಿಗಳನ್ವಯ ಕೋವಿಡ್ ಪರೀಕ್ಷೆಗಳನ್ನು ನಡೆಸಿ ವಿಳಂಬ ಮಾಡದೆ ವರದಿಗಳನ್ನು ನೀಡಿ. ಕೋವಿಡ್ ಸೋಂಕು ದೃಢಪಟ್ಟವರನ್ನು ಆಸ್ಪತ್ರೆಗೆ ದಾಖಲಿಸುವ ಬದಲು ಹೋಮ್ ಐಸೋಲೇಶನ್ ಮಾಡಲು ಗ್ರಾಮಾಂತರ ಪ್ರದೇಶದಲ್ಲಿ ಸೌಲಭ್ಯಗಳ ಕೊರತೆ ಇರುವುದರಿಂದ ವೈದ್ಯರ ಸಲಹೆ ಪಡೆದು ಕೋವಿಡ್ ಆರೈಕೆ ಕೇಂದ್ರಗಳಲ್ಲಿ ದಾಖಲಿಸಬೇಕು. ಹೆಚ್ಚು ಪ್ರಕರಣಗಳು ದಾಖಲಾದ್ದಲ್ಲಿ ಮೈಕ್ರೋ ಕಂಟೇನ್ಮೆಂಟ್ ವಲಯ ಮಾಡಬೇಕು ಎಂದು ಸಚಿವ ಸುಧಾಕರ್ ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದಲ್ಲಿ ಶೀಘ್ರವೇ ಮಕ್ಕಳಿಗಾಗಿ "ಆರೋಗ್ಯ ನಂದನ" ಎಂಬ ವಿಶೇಷ ಆರೋಗ್ಯ ಯೋಜನೆಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ. ಅಪೌಷ್ಟಿಕತೆ, ರಕ್ತಹೀನತೆ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ವಿಶೇಷ ಆರೈಕೆ, ಕಾಳಜಿ ಹಾಗೂ ಚಿಕಿತ್ಸೆ ನೀಡುವ ಮೂಲಕ ಕೋವಿಡ್ ಮೂರನೇ ಅಲೆ ಬಾಧಿಸದಂತೆ ತಡೆಯಲಾಗುವುದು.
ಡಿಸೆಂಬರ್ ಅಂತ್ಯಕ್ಕೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ನೀಡುವ ಉದ್ದೇಶ ಹೊಂದಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 4,20,360 ಮೊದಲ ಡೋಸ್, 1,20,756 ಎರಡನೇ ಡೋಸ್ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಗೆ ಹೆಚ್ಚಿನ ಲಸಿಕೆ ಪೂರೈಕೆ ಮಾಡಲಾಗುವುದು.
ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ ಆಗಸ್ಟ್ 23ರಿಂದ ಶಾಲಾ-ಕಾಲೇಜುಗಳು ಪ್ರಾರಂಭಿಸಲಾಗ್ತಿದೆ. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದುಕೊಳ್ಳಬೇಕು. ಮಕ್ಕಳ ಆರೋಗ್ಯವೂ ಮುಖ್ಯವಾಗಿರುವುದರಿಂದ ಆರೋಗ್ಯ ಇಲಾಖೆ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳು ಕಡ್ಡಾಯವಾಗಿ ಪಾಲಿಸಬೇಕು.
ಕೋವಿಡ್ ವಿರುದ್ಧದ ಹೋರಾಟದಲ್ಲಿ ಸರ್ಕಾರದ ಜೊತೆಗೆ ಸಾರ್ವಜನಿಕರು ಸಹಕರಿಸಬೇಕು. ಮಾರುಕಟ್ಟೆ, ಮದುವೆ, ಜಾತ್ರೆ, ಸಭೆ-ಸಮಾರಂಭಗಳಲ್ಲಿ ಹೆಚ್ಚು ಜನ ಸೇರದಂತೆ ಕ್ರಮ ವಹಿಸಬೇಕು ಹಾಗೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುಬೇಕು ಎಂದು ಸಚಿವ ಡಾ.ಕೆ.ಸುಧಾಕರ್ ಸಲಹೆ ನೀಡಿದರು.
ಹೊಸಕೋಟೆ ತಾಲೂಕಿಗೆ ಶ್ರೀಘ್ರದಲ್ಲೇ ತಾಯಿ ಮತ್ತು ಮಗುವಿನ ಆಸ್ಪತ್ರೆ
ಹೊಸಕೋಟೆ ತಾಲೂಕಿನಲ್ಲಿ 13 ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳಿವೆ. ಇದರೊಂದಿಗೆ ತಾಲೂಕಿಗೆ ತಾಯಿ ಮತ್ತು ಮಗುವಿನ ಆಸ್ಪತ್ರೆಯ ಅವಶ್ಯಕತೆಯಿದೆ ಎಂದು ಮನವಿ ಮಾಡಿದ್ದಾರೆ. ಹಾಗಾಗಿ ತಾಲೂಕಿನಲ್ಲಿ ತಾಯಿ ಮತ್ತು ಮಗುವಿನ ಆಸ್ಪತ್ರೆ ನಿರ್ಮಾಣಕ್ಕೆ ಒತ್ತು ನೀಡಲಾಗುವುದು ಎಂದು ಸಚಿವರು ಹೇಳಿದರು.
ತಾಲೂಕಿನ ಕುರಬರಹಟ್ಟಿ ಜನತಾ ಕಾಲೋನಿಯಲ್ಲಿರುವ ಸೂಲಿಬೆಲೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, "ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ" ಪರಿವೀಕ್ಷಣೆ ನಡೆಸಿ ಸಚಿವರು ಮಾತನಾಡಿದರು.