ದೊಡ್ಡಬಳ್ಳಾಪುರ: ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದ್ದು, ಮುಖವನ್ನ ಕಾಡು ಪ್ರಾಣಿಗಳು ಕಚ್ಚಿ ತಿಂದಿರುವುದರಿಂದ ಮಹಿಳೆಯ ಗುರುತು ಪತ್ತೆಯಾಗಿಲ್ಲ.
ದೊಡ್ಡಬಳ್ಳಾಪುರ ತಾಲೂಕಿನ ಕಳ್ಳರಗುಟ್ಟೆ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಮಂಗಳವಾರ ತೂಬಗೆರೆ ಗ್ರಾಮಸ್ಥನೊಬ್ಬ ಅರಣ್ಯಕ್ಕೆ ಭೇಟಿ ನೀಡಿದ್ದಾಗ ಪ್ರಕರಣ ಬೆಳಕಿಗೆ ಬಂದಿದ್ದು ಗ್ರಾಮಸ್ಥ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ಕೂಡಲೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಸುಮಾರು 45 ವರ್ಷದ ಮಹಿಳೆ ಎಂದು ಗುರುತಿಸಲಾಗಿದೆ. ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಶವವನ್ನು ಅರಣ್ಯದಲ್ಲಿ ಎಸೆದು ಪರಾರಿಯಾಗಿ ಸಾಧ್ಯತೆ ಇದೆ. ಮಹಿಳೆಯ ಶವ ಪೂರ್ತಿ ಕೊಳೆತ ಸ್ಥಿತಿಯಲ್ಲಿದ್ದು, ಕಾಡು ಪ್ರಾಣಿಗಳು ಮುಖವನ್ನೆಲ್ಲ ಕಚ್ಚಿ ತಿಂದಿವೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.