ಬೆಂಗಳೂರು : ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಲಾಕ್‌ಡೌನ್ ಜಾರಿ ಮಾಡಿದ ಬಳಿಕ ಸಂಕಷ್ಟಕ್ಕೆ ಸಿಲುಕಿದ 12.39 ಲಕ್ಷ ಕಟ್ಟಡ ಕಾರ್ಮಿಕರಿಗೆ ತಲಾ ₹5 ಸಾವಿರ ಪರಿಹಾರವನ್ನು ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಕಟ್ಟಡ ಕಾರ್ಮಿಕರಿಗೆ ಪರಿಹಾರ ನೀಡುವಂತೆ ಕೋರಿ ವಿಧಾನಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ಎ ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ರಾಜ್ಯ ಸರ್ಕಾರದ ಪರ ವಕೀಲರು ಪರಿಹಾರಕ್ಕೆ ಸಂಬಂಧಿಸಿದ ಲಿಖಿತ ಮಾಹಿತಿಯನ್ನು ಪೀಠಕ್ಕೆ ಸಲ್ಲಿಸಿದರು.
ಲಾಕ್ಡೌನ್ನಿಂದ ಸಂಕಷ್ಟಕ್ಕೊಳಗಾದ ಕಟ್ಟಡ ಕಾರ್ಮಿಕರಿಗೆ ಮುಖ್ಯಮಂತ್ರಿಯವರು ಘೋಷಿಸಿದ ವಿಶೇಷ ಪ್ಯಾಕೇಜ್ ಅನ್ವಯ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿಕೊಂಡಿರುವ 12.39 ಲಕ್ಷ ಕಾರ್ಮಿಕರಿಗೆ ₹5 ಸಾವಿರ ಪರಿಹಾರವನ್ನು ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ. ಇನ್ನುಳಿದ ಕಾರ್ಮಿಕರ ಬ್ಯಾಂಕ್ ಖಾತೆ ಮತ್ತು ವಿವರಗಳನ್ನು ಪರಿಶೀಲಿಸಲು ಜಿಲ್ಲಾ ಕಾರ್ಮಿಕ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಇದೇ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಕಾರ್ಮಿಕರನ್ನು ನೋಂದಾಯಿಸಿಕೊಳ್ಳುವ ವೇಳೆ ಸುಪ್ರೀಂಕೋರ್ಟ್ ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗಿದೆ. ನೋಂದಾಯಿತ ಕಾರ್ಮಿಕರಿಗೆ ಗುರುತಿನ ಚೀಟಿ ನೀಡಿಲ್ಲ, ಜೊತೆಗೆ ಬ್ಯಾಂಕ್ ಖಾತೆ ಇಲ್ಲದೆಯೂ ಕಾರ್ಮಿಕರನ್ನು ನೋಂದಾಯಿಸಿಕೊಳ್ಳಲಾಗಿದೆ ಎಂದು ಆರೋಪಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರ, ಕಲ್ಯಾಣ ಮಂಡಳಿಯಲ್ಲಿ 21. 80 ಲಕ್ಷ ಕಾರ್ಮಿಕರು ಇದ್ದಾರೆ ಎಂದು ಹೇಳಿದೆ. ಹಾಗೆಯೇ 12. 39 ಲಕ್ಷ ಕಾರ್ಮಿಕರಿಗೆ ಪರಿಹಾರ ನೀಡಿದೆ. ಹಾಗಿದ್ದರೆ ಉಳಿದ ಕಾರ್ಮಿಕರಿಗೆ ಪರಿಹಾರ ನೀಡುವುದು ಯಾವಾಗ? ಬ್ಯಾಂಕ್ ಖಾತೆ ಹೊಂದಿಲ್ಲದ ಕಾರ್ಮಿಕರಿಗೆ ಪರಿಹಾರ ನೀಡುವುದು ಹೇಗೆ? ಕಾರ್ಮಿಕರ ನೋಂದಣಿ ಪ್ರಕ್ರಿಯೆಯ ಮಾನದಂಡಗಳೇನು ಎಂಬುದನ್ನು ಮುಂದಿನ ಕಲಾಪದ ವೇಳೆ ತಿಳಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.