ಬೆಂಗಳೂರು : ರಾಜ್ಯದ ಕ್ರೀಡಾಪಟುಗಳ ಅನುಕೂಲಕ್ಕಾಗಿ ನಾಲ್ಕು ಕಡೆ ಕ್ರೀಡಾಂಗಣ ನಿರ್ಮಾಣ ಹಾಗೂ ಸೌಲಭ್ಯ ಕಲ್ಪಿಸಲು ಖೇಲೋ ಇಂಡಿಯಾ ಯೋಜನೆಯಡಿ ಕೇಂದ್ರ ಸರ್ಕಾರ 19.50 ಕೋಟಿ ಅನುದಾನವನ್ನು ರಾಜ್ಯಕ್ಕೆ ಬಿಡುಗಡೆ ಮಾಡಿದೆ ಎಂದು ಕನ್ನಡ, ಸಂಸ್ಕೃತಿ ಮತ್ತು ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಸಿ.ಟಿ ರವಿ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ₹3.5 ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣ, ಚಿಕ್ಕಮಗಳೂರು ಜಿಲ್ಲಾ ಕ್ರೀಡಾಂಗಣದಲ್ಲಿ ಒಳಾಂಗಣ ಸಭಾಂಗಣ ನಿರ್ಮಾಣಕ್ಕೆ ₹4.5 ಕೋಟಿ, ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣಕ್ಕೆ ₹7 ಕೋಟಿ, ಕೊಪ್ಪಳ್ಳ ಜಿಲ್ಲಾ ಕ್ರೀಡಾಂಗಣದಲ್ಲಿ ಸಭಾಂಗಣ ನಿರ್ಮಾಣಕ್ಕೆ ₹4.5 ಕೋಟಿ ರೂ.ಸೇರಿ ಒಟ್ಟು ರಾಜ್ಯಕ್ಕೆ ₹19.5 ಕೋಟಿ ರೂ.ಗಳ ಅನುದಾನವನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ಮಂಜೂರು ಮಾಡಿದೆ.
ಆಗಸ್ಟ್ 19ರಂದು ದೆಹಲಿ ಪ್ರವಾಸ ಕೈಗೊಂಡಿದ್ದ ವೇಳೆ ಸಚಿವ ಸಿ.ಟಿ ರವಿ, ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರನ್ನು ಭೇಟಿ ಮಾಡಿ ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ನೆರವು ನೀಡುವಂತೆ ಮನವಿ ಮಾಡಿದ್ದರು. ಬಹುಪಯೋಗಿ ಒಳಾಂಗಣ ಕ್ರೀಡಾಂಗಣ ನಿರ್ಮಾಣ, ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ, ಕ್ರೀಡಾಂಗಣದಲ್ಲಿ ಸಭಾಂಗಣ ನಿರ್ಮಾಣ, ಮೂಲಸೌಕರ್ಯ ಕಲ್ಪಿಸುವುದು ಸೇರಿದಂತೆ ಹಲವು ಬೇಡಿಕೆ ಇರಿಸಿ ಅನುದಾನಕ್ಕೆ ಮನವಿ ಮಾಡಿದ್ದರು.
ಸಚಿವ ಸಿ.ಟಿ ರವಿ ಮನವಿಗೆ ಕೇಂದ್ರ ಸ್ಪಂದಿಸಿದ್ದು 19.5 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಮನವಿಗೆ ಸ್ಪಂದಿಸಿ ಅನುದಾನ ಬಿಡುಗಡೆ ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜುಗೆ ಸಿಟಿ ರವಿ ಅಭಿನಂದನೆ ಸಲ್ಲಿಸಿದ್ದಾರೆ.