ಬೆಂಗಳೂರು: ಉತ್ತರ ಕರ್ನಾಟಕ, ಕರಾವಳಿ ಮತ್ತು ಮಲೆನಾಡಿನಲ್ಲಿ ಎದುರಾಗಿರುವ ನೆರೆ ಹಾವಳಿ ಪರಿಹಾರ ಕಾರ್ಯಾಚರಣೆಗೆ ನೆರವಾಗಲು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ₹ 2 ಕೋಟಿ ಅನುದಾನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ವಿಧಾನ ಪರಿಷತ್ ಸದಸ್ಯ ಲೆಹರ್ ಸಿಂಗ್ ನೀಡಿದ್ದಾರೆ.
ಸಂಕಷ್ಟದ ಸಮಯದಲ್ಲಿ ಎಲ್ಲ ರೀತಿಯ ನೆರವು ನೀಡುವಲ್ಲಿ ಮತ್ತು ಪರಿಹಾರ ಕಾರ್ಯದಲ್ಲಿ ಭಾಗಿಯಾಗುವುದು ಶಾಸಕರ ಕರ್ತವ್ಯ. ಅದರಂತೆ ನೆರೆ ಸಂತ್ರಸ್ತರಿಗೆ ಸರ್ಕಾರದ ಜೊತೆ ಕೈಜೋಡಿಸುತ್ತಿದ್ದೇವೆ. ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುತ್ತಿದ್ದೇನೆ ಎಂದು ಸಿಎಂಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಕೊಡಗು ನೆರೆ ಹಾವಳಿಯಲ್ಲಿಯೂ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ₹1 ಕೋಟಿ ನೀಡಿದ್ದು, ಅದು ಬಳಕೆಯಾಗಿಲ್ಲ. ಆ ಹಣವನ್ನೂ ಕೂಡ ಈಗ ಸಂಭವಿಸಿರುವ ಪ್ರವಾಹ ಪೀಡಿತ ಜನರ ಪರಿಹಾರ ಕಾರ್ಯಾಚರಣೆಗೆ ಬಳಸಿಕೊಳ್ಳುವಂತೆ ಪತ್ರದ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಶಾಸಕರ ನಿಧಿಯಲ್ಲದೇ ವೈಯಕ್ತಿಕವಾಗಿ ಸಂಘ, ಸಂಸ್ಥೆ, ಸಮಾಜದಿಂದ ದೇಣಿಗೆ ಸಂಗ್ರಹ ಮಾಡುತ್ತಿದ್ದು. ಆ ಹಣವನ್ನೂ ಸದ್ಯದಲ್ಲೇ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಗುತ್ತದೆ ಎಂದು ಸಿಎಂಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ.