ಬೆಂಗಳೂರು: ರಾಷ್ಟ್ರೀಯ ಕಾನೂನು ಶಾಲೆಯಲ್ಲಿ(NLSIU) ಕನ್ನಡಿಗರಿಗೆ ಶೇ 25ರಷ್ಟು ಮೀಸಲು ಕಲ್ಪಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.
ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ ಕನ್ನಡಿಗರಿಗೆ ಶೇ.25ರಷ್ಟು ಸೀಟುಗಳನ್ನು ನೀಡಿರುವ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಭಾರತೀಯ ವಕೀಲರ ಪರಿಷತ್ತು ಹಾಗೂ ಕೆಲ ವಿದ್ಯಾರ್ಥಿಗಳು ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳನ್ನು ಹಿರಿಯ ನ್ಯಾಯಮೂರ್ತಿ ಬಿ.ವಿ ನಾಗರತ್ನ ಅವರಿದ್ದ ಪೀಠ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲರು ಹಾಗೂ ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಅವರ ಸುದೀರ್ಘ ವಾದ-ಪ್ರತಿವಾದ ಆಲಿಸಿದ ಪೀಠ ತೀರ್ಪು ಕಾಯ್ದಿರಿಸಿತು.
ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ ಕಾಯ್ದೆಗೆ ಕಳೆದ ಮಾರ್ಚ್ ತಿಂಗಳಲ್ಲಿ ರಾಜ್ಯ ಸರ್ಕಾರ ತಿದ್ದುಪಡಿ ತಂದು ವಿವಿಯಲ್ಲಿ ಕನ್ನಡಿಗರಿಗೆ ಶೇ. 25 ಸೀಟುಗಳನ್ನು ಮೀಸಲಿಟ್ಟಿದೆ. ಅದರಂತೆ ರಾಜ್ಯದಲ್ಲಿ 10 ವರ್ಷಗಳ ಕಾಲ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ವಿವಿಯ ಪ್ರವೇಶ ಪರೀಕ್ಷೆ ಪಾಸು ಮಾಡುವ ಮೂಲಕ ಸೀಟು ಪಡೆದುಕೊಳ್ಳಬಹುದಾಗಿದೆ.