ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ನಾಗರಿಕ ರಾಷ್ಟ್ರೀಯ ನೋಂದಣಿ ವಿರೋಧಿಸಿ ಪ್ರತಿಭಟನೆ ನಡೆಸುವ ಹಿನ್ನೆಲೆಯಲ್ಲಿ ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ, ಮೂರು ದಿನಗಳ ಕಾಲ 144 ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಬುಧವಾರ ಸಂಜೆ ಕರೆದಿದ್ದ ತುರ್ತು ಮಾಧ್ಯಮಗೋಷ್ಟಿಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಪ್ರತಿಭಟನೆ, ಧರಣಿ, ಮೆರವಣಿಗೆ, ಕಾರ್ಯಕ್ರಮಗಳಿಂದ ಸಾರ್ವಜನಿಕರ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಘಟನೆಗಳು ನಡೆಯುತ್ತವೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ, ಮೂರು ದಿನಗಳ ಕಾಲ ಅಂದರೆ, ಡಿ.19 ರಿಂದ ಬೆಳಗ್ಗೆ 6 ಗಂಟೆಯಿಂದ ಡಿ.21 ರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.
ಈ ಕಾಯ್ದೆ ವಿರೋಧಿಸಿ ಕೆಲ ರಾಜಕೀಯ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು ಹಾಗೂ ಇನ್ನಿತರೆ ಸಂಘಟನೆಗಳು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುತ್ತಿವೆ. ಈ ಹೇಳಿಕೆಗಳಿಂದ ಪ್ರೇರಿತರಾಗಿ ಯಾವುದೇ ಪೂರ್ವಾನುಮತಿ ಪಡೆಯದೆ ಏಕಾಏಕಿಯಾಗಿ ಬೆಂಗಳೂರು ನಗರ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರ ಆಸ್ತಿಪಾಸ್ತಿಗಳಿಗೆ ಉಂಟಾಗುವ ನಷ್ಟ ತಡೆಗಟ್ಟುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಇನ್ನು, ಈಗಾಗಲೇ ಮುಂಜಾಗೃತ ಕ್ರಮವಾಗಿ ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ರು.
ಶಾಲಾ-ಕಾಲೇಜು, ಕಮರ್ಷಿಯಲ್ ಏರಿಯಾ, ಸಿಟಿ ಮಾರ್ಕೆಟ್, ಬಸ್ ನಿಲ್ದಾಣ,ರೈಲು ನಿಲ್ದಾಣ, ಓಲಾ ಆಟೋಗಳ ಸಂಚಾರಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ತಿಳಿಸಿದರು.