ಬೆಂಗಳೂರು: ಲಾಕ್ಡೌನ್ ಪರಿಣಾಮ ಸಂಕಷ್ಟಕ್ಕೆ ಸಿಲುಕಿರುವ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕರ ಕಲ್ಯಾಣ ಸೆಸ್ ನಿಧಿಯಿಂದ ತಲಾ 5 ಸಾವಿರ ರೂ. ಆರ್ಥಿಕ ನೆರವು ನೀಡಿದ್ದೇವೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‍ಗೆ ಮಾಹಿತಿ ನೀಡಿದೆ.
ರಾಜ್ಯದ ನೋಂದಾಯಿತ ಮತ್ತು ನೋಂದಾಯಿತರಲ್ಲದ ಕಟ್ಟಡ ಕಾರ್ಮಿಕರಿಗೆ 'ಕಟ್ಟಡ ಹಾಗೂ ಇತರ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ನಿಧಿ'ಯಿಂದ ತಲಾ 10 ಸಾವಿರ ರೂ. ಪರಿಹಾರ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿತು.
ಈ ವೇಳೆ ಸರ್ಕಾರದ ಪರ ವಕೀಲರು ವಾದ ಮಂಡಿಸಿ, ಲಾಕ್ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಶ್ರಮಿಕ ವರ್ಗಕ್ಕೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ಅದರಂತೆ ಕಟ್ಟಡ ಕಾರ್ಮಿಕರ ಪೈಕಿ ನೋಂದಾಯಿತ ಕಾರ್ಮಿಕರಿಗೆ ಕಾರ್ಮಿಕರ ಕಲ್ಯಾಣ ಸೆಸ್ ನಿಧಿಯಿಂದ ತಲಾ 5 ಸಾವಿರ ರೂ. ಆರ್ಥಿಕ ನೆರವು ನೀಡಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆ ಮುಂದೂಡಿತು.
15.80 ಲಕ್ಷ ಕಾರ್ಮಿಕರಿಗೆ ನೆರವು:
ರಾಜ್ಯದಲ್ಲಿ 15.80 ಲಕ್ಷ ನೋಂದಾಯಿತ ಕಟ್ಟಡ ಕಾರ್ಮಿಕರಿದ್ದು, ಆ ಪೈಕಿ 11.80 ಲಕ್ಷ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ತಲಾ 2 ಸಾವಿರ ರೂಪಾಯಿಯನ್ನು ಈಗಾಗಲೇ ಜಮೆ ಮಾಡಿದ್ದೇವೆ. ಇದರ ಜೊತೆಗೆ ಹೆಚ್ಚುವರಿಯಾಗಿ 3 ಸಾವಿರ ರೂ. ನೀಡಲು ಸರ್ಕಾರ ತೀರ್ಮಾನಿಸಿದೆ. ಉಳಿದ 4 ಲಕ್ಷ ಕಾರ್ಮಿಕರ ಬ್ಯಾಂಕ್ ಖಾತೆಗಳ ಪರಿಶೀಲನೆ ಕಾರ್ಯ ಮುಗಿದ ತಕ್ಷಣ ಹಣ ವರ್ಗಾವಣೆ ಮಾಡಲಾಗುವುದು. ಅದರಂತೆ ಒಟ್ಟು 15.80 ಲಕ್ಷ ಕಾರ್ಮಿಕರಿಗೆ ತಲಾ 5 ಸಾವಿರ ರೂ.ಗಳನ್ನು ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಗುವುದು ಎಂದು ಸರ್ಕಾರ ಹೈಕೋರ್ಟ್‍ಗೆ ಮಾಹಿತಿ ನೀಡಿದೆ.