ಬೆಂಗಳೂರು: ರೈಲು ಬೋಗಿಗಳ ಬ್ಯಾಟರಿ ಕಳವು ಮಾಡಿದ್ದ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳನ್ನು ಆರ್‌ಪಿಎಫ್ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಿಂದ 2.76 ಲಕ್ಷ ರೂ. ಮೌಲ್ಯದ 15 ಬ್ಯಾಟರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಸದ್ಯ ಆರೋಪಿಗಳನ್ನು ನಗರದ ಆರ್ಥಿಕ ಅಪರಾಧ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಆರು ದಿನಗಳ ಕಾಲ ವಶಕ್ಕೆ ಪಡೆಯಲಾಗಿದೆ ಎಂದು ಆರ್‌ಪಿಎಫ್ ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿಗಳು ಜುಲೈ 2ರಂದು ಗೊಲ್ಲಹಳ್ಳಿ ರೈಲು ನಿಲ್ದಾಣದಲ್ಲಿ ನಿಲುಗಡೆಯಾಗಿದ್ದ ಎಸಿ ಕೋಚ್‌ಗಳ ಬ್ಯಾಟರಿ ಕಳವು ಮಾಡಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು. ಸಿಸಿ ಕ್ಯಾಮರಾಗಳಲ್ಲಿ ಸೆರೆಯಾಗಿದ್ದ ದೃಶ್ಯಗಳನ್ನು ಆಧರಿಸಿ ಡಿ.ಜೆ.ಹಳ್ಳಿ ವ್ಯಾಪ್ತಿಯ ಇಸ್ಲಾಂಪುದಲ್ಲಿದ್ದ ಇಬ್ಬರನ್ನು ಬಂಧಿಸಲಾಗಿತ್ತು. ಈ ಇಬ್ಬರು ಆರೋಪಿಗಳು ನೀಡಿದ ಸುಳಿವಿನ ಮೇರೆಗೆ ಬ್ಯಾಟರಿ ಖರೀದಿ ಮಾಡಿದ್ದವನು ಸೇರಿ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿ ತನಿಖೆ ಮುಂದುವರೆಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.