ಬೆಂಗಳೂರು: ಪಶುಸಂಗೋಪನೆ ಇಲಾಖೆ ಸಚಿವ ಪ್ರಭು ಚೌವ್ಹಾಣ್ ಅವರ ನಕಲಿ ಸಹಿ ಬಳಸಿ ನೇಮಕಾತಿ ಅಧಿಸೂಚನೆ ಹೊರಡಿಸಿದ್ದ ಕಿಡಿಗೇಡಿಗಳ ವಿರುದ್ಧ ಸಂಜಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಶುಪಾಲನಾ ಇಲಾಖೆ ಜಂಟಿ ನಿರ್ದೇಶಕ ರಮೇಶ್ ನೀಡಿದ ದೂರಿನ ಮೇರೆಗೆ ಅಪರಿಚಿತರ ವಿರುದ್ಧ ವಂಚನೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಪಶು ಸಂಗೋಪನೆ ಇಲಾಖೆಯಲ್ಲಿ ಪ್ರಥಮ ಹಾಗೂ ದ್ವಿತೀಯ ದರ್ಜೆ ಹುದ್ದೆಗಳು ಸೇರಿದಂತೆ ಒಟ್ಟು 93 ಹುದ್ದೆಗಳಿಗೆ ಆರೋಪಿಗಳು ನಕಲಿ ನೇಮಕಾತಿ ಅಧಿಸೂಚನೆ ಹೊರಡಿಸಿದ್ದಾರೆ. ವಿಶೇಷ ನೇರ ನೇಮಕಾತಿ ನಿಯಮ-2019ರ ಪ್ರಕಾರ 93 ಅಭ್ಯರ್ಥಿಗಳ ತಾತ್ಕಾಲಿಕ ಹಾಗೂ ಅಂತಿಮ ಪಟ್ಟಿ ಇಲಾಖೆಯ ವೆಬ್ ಸೈಟ್ನಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆ ಸಲ್ಲಿಸುವವರು ಹೆಬ್ಬಾಳದಲ್ಲಿರುವ ಇಲಾಖೆ ಪ್ರಧಾನ ಕಚೇರಿಯಲ್ಲಿರುವ ಆಯ್ಕೆ ಸಮಿತಿ ಕಾರ್ಯದರ್ಶಿ (ಆಡಳಿತ) ಸಂಪರ್ಕಿಸಬಹುದು ಎಂದಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ನವರ ವೀಕ್ನೆಸ್ ಮೇಲೆ ನಾವು ರಾಜಕೀಯ ಮಾಡುವುದಿಲ್ಲ: ಹೆಚ್ ಡಿ ಕುಮಾರಸ್ವಾಮಿ
ಇದರ ಪ್ರತಿಯನ್ನು ವಿಧಾನಸೌಧದಲ್ಲಿರುವ ಮುಖ್ಯಮಂತ್ರಿ ಕಚೇರಿಗೂ ಆರೋಪಿಗಳು ಸಲ್ಲಿಸಿದ್ದರು. ಈ ಬಗ್ಗೆ ಮಾಹಿತಿ ಅರಿತ ಇಲಾಖೆಯ ಹಿರಿಯ ಅಧಿಕಾರಿಗಳು ಪ್ರಥಮ ಹಾಗೂ ದ್ವಿತೀಯ ದರ್ಜೆ ಸೇರಿದಂತೆ ಯಾವುದೇ ಹುದ್ದೆಗಳಿಗೆ ಇಲಾಖೆಯಿಂದ ನೇಮಕಾತಿ ಅಧಿಸೂಚನೆ ಹೊರಡಿಸಿಲ್ಲ. ಈ ಬಗ್ಗೆ ಸಾರ್ವಜನಿಕರು ಎಚ್ಚರದಿಂದಿರಬೇಕು ಎಂದು ಮನವಿ ಮಾಡಿದ್ದಾರೆ.