ಬೆಂಗಳೂರು: ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿದೆ. ಮುತ್ತು ಶಿಕ್ಷೆಗೆ ಗುರಿಯಾದ ವ್ಯಕ್ತಿ. ಈತನ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ನಗರದ 2ನೇ ತ್ವರಿತಗತಿ ನ್ಯಾಯಾಲಯದ ನ್ಯಾಯಾಧೀಶ ಎ.ಜಿ. ಗಂಗಾಧರ್ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಸಂತ್ರಸ್ತ ಬಾಲಕಿಗೆ 4 ಲಕ್ಷ ರೂ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.
ಪ್ರಕರಣದ ಹಿನ್ನೆಲೆ: 2015ರ ಸೆಪ್ಟೆಂಬರ್ 2ರಂದು ಭಾರತ್ ಬಂದ್ ಇದ್ದುದರಿಂದ 6 ವರ್ಷದ ಬಾಲಕಿ ಮನೆ ಮುಂದೆ ಆಟವಾಡುತ್ತಿತ್ತು. ಈ ವೇಳೆ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದಿದ್ದ ಆರೋಪಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ವಿಚಾರ ಬೆಳಕಿಗೆ ಬರುತ್ತಲೇ ಪೋಷಕರು ಹೆಚ್ಎಎಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ದೂರಿನ ಮೇರೆಗೆ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಹಾಗೂ ಪೋಕ್ಸೊ ಕಾಯ್ದೆಯ ಸೆಕ್ಷನ್ 6ರ ಅಡಿ ಎಫ್ಐಆರ್ ದಾಖಲಿಸಿದ್ದರು. ಬಳಿಕ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದ್ದರು. ಅಭಿಯೋಜನೆ ಪರ ಸರ್ಕಾರಿ ಅಭಿಯೋಜಕ ಕೆ.ವಿ.ಅಶ್ವತ್ಥ ನಾರಾಯಣ ಗೌಡ ವಾದ ಮಂಡಿಸಿದ್ದರು.
ಇದನ್ನೂ ಓದಿ: ಗೃಹಸಚಿವರ ತವರಲ್ಲಿ ಅಕ್ರಮ ಮರಳು ಗಣಿಗಾರಿಕೆಗಿಲ್ಲ ಕಡಿವಾಣ: ಪ್ರತಿದಿನ ಸರ್ಕಾರಕ್ಕೆ ₹30 ಲಕ್ಷ ನಷ್ಟ!