ಪಾದಚಾರಿ ಮಾರ್ಗಗಳನ್ನು ಸುಸ್ಥಿತಿಯಲ್ಲಿಡದಿದ್ದರೆ ಕ್ರಮ : ಬಿಬಿಎಂಪಿಗೆ ಹೈಕೋರ್ಟ್ ಎಚ್ಚರಿಕೆ - Maintenance of pedestrian road
ಬೆಂಗಳೂರು ನಗರದಲ್ಲಿರುವ ಪಾದಚಾರಿ ಮಾರ್ಗಗಳ ಮೇಲೆ ವಾಹನ ನಿಲುಗಡೆ ಮಾಡದಿರುವಂತೆ ಹಾಗೂ ಒತ್ತುವರಿಯನ್ನು ತೆರವು ಮಾಡಲು ಪಾಲಿಕೆಗೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಬೆಂಗಳೂರು: ಉತ್ತಮ ಪಾದಚಾರಿ ಮಾರ್ಗಗಳನ್ನು ನೀಡುವುದು ಪಾಲಿಕೆ ಹಾಗೂ ಸರ್ಕಾರದ ಜವಾಬ್ದಾರಿ. ಅದನ್ನು ಸರಿಯಾಗಿ ನಿರ್ವಹಣೆ ಮಾಡದಿದ್ದರೆ ಅರ್ಜಿದಾರರು ಕೋರಿರುವಂತೆ ಈ ಕೆಲಸದ ನಿರ್ವಹಣೆಗೆ ಪ್ರತ್ಯೇಕ ಏಜೆನ್ಸಿ ಸ್ಥಾಪಿಸಲು ಆದೇಶಿಸಬೇಕಾಗುತ್ತದೆ ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ.
ನಗರದಲ್ಲಿರುವ ಪಾದಚಾರಿ ಮಾರ್ಗಗಳ ಮೇಲೆ ವಾಹನ ನಿಲುಗಡೆ ಮಾಡದಿರುವಂತೆ ಹಾಗೂ ಒತ್ತುವರಿಯನ್ನು ತೆರವು ಮಾಡಲು ಪಾಲಿಕೆಗೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ಈ ಎಚ್ಚರಿಕೆ ನೀಡಿದೆ.
ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಪಾದಚಾರಿ ಮಾರ್ಗಗಳ ಮೇಲೆ ವಾಹನ ನಿಲುಗಡೆ ಮಾಡಬಾರದು ಮತ್ತು ನಿಲುಗಡೆ ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಸೂಚಿಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ಅದೇ ರೀತಿ ಬಿಬಿಎಂಪಿ ಮುಖ್ಯ ಆಯುಕ್ತರು ಸಹ ಪಾಲಿಕೆಯ ಎಂಟು ವಲಯಗಳಿಗೆ ಸಂಬಂಧಿಸಿದಂತೆ ಸುತ್ತೋಲೆ ಹೊರಡಿಸಿದ್ದಾರೆ. ಸುತ್ತೋಲೆ ಬಗ್ಗೆ ಅರಿವು ಮೂಡಿಸಲು ಬಿಬಿಎಂಪಿ ಜಾಹೀರಾತು ನೀಡಿದೆ. ಪಾದಚಾರಿ ಮಾರ್ಗಕ್ಕೆ ಸಂಬಂಧಿಸಿದ ನಿಯಮಗಳು ಮತ್ತು ಪಾದಚಾರಿ ಮಾರ್ಗದ ಮೇಲೆ ವಾಹನ ನಿಲುಗಡೆ ಮಾಡದಿರಲು ಹೈಕೋರ್ಟ್ ನೀಡಿರುವ ನಿರ್ದೇಶನಗಳನ್ನು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿಸಿದರು.
ಹೇಳಿಕೆ ದಾಖಲಿಸಿಕೊಂಡ ಪೀಠ, ಪಾದಚಾರಿ ಮಾರ್ಗಗಳ ಮೇಲೆ ವಾಹನ ನಿಲುಗಡೆ ತಡೆಗೆ ಯಾವೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿತು. ಅಲ್ಲದೆ, ಪಾದಚಾರಿ ಮಾರ್ಗಗಳ ಒತ್ತುವರಿಯನ್ನು ತೆರವುಗೊಳಿಸಬೇಕು. ಗುಣಮಟ್ಟದ ಪಾದಚಾರಿ ಮಾರ್ಗಗಳನ್ನು ಹೊಂದುವುದು ಜನರ ಹಕ್ಕು. ನಿಯಮಗಳನ್ನು ಪಾಲಿಸಬೇಕು. ಇಲ್ಲವಾದರೆ ಒತ್ತುವರಿ ತೆರವಿಗೆ ಮತ್ತು ಅದರ ಮೇಲ್ವಿಚಾರಣೆಗೆ ಸ್ವತಂತ್ರ ಏಜೆನ್ಸಿ ಸ್ಥಾಪಿಸಲು ಆದೇಶಿಸುವಂತೆ ಅರ್ಜಿದಾರರು ಮಾಡಿರುವ ಮನವಿಯನ್ನು ನ್ಯಾಯಾಲಯ ಪರಿಗಣಿಸಬೇಕಾಗುತ್ತದೆ ಎಂದು ಸರ್ಕಾರ ಹಾಗೂ ಪಾಲಿಕೆಗೆ ಎಚ್ಚರಿಸಿ, ವಿಚಾರಣೆಯನ್ನು ಆಗಸ್ಟ್ 5ಕ್ಕೆ ಮುಂದೂಡಿತು.
ಓದಿ: ಕುಮಾರಸ್ವಾಮಿ ಬರೀ ಸುಳ್ಳು ಹೇಳ್ತಾರೆ, ಅದಕ್ಕೆಲ್ಲಾ ನಾನು ಉತ್ತರ ಕೊಡಲ್ಲ: ಸಿದ್ದರಾಮಯ್ಯ