ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ಸ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿರುವ ನಟಿ ಸಂಜನಾ ಗಲ್ರಾನಿ ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಎನ್ಡಿಪಿಎಸ್ ವಿಶೇಷ ಕೋರ್ಟ್ ಜಾಮೀನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಂಜನಾ ಪರ ವಕೀಲರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರ ಅಪರಾಧ ವಿಭಾಗದ ಪೊಲೀಸರು ಹಾಗೂ ಪ್ರಕರಣ ದಾಖಲಿಸಿಕೊಂಡಿರುವ ಕಾಟನ್ ಪೇಟೆ ಠಾಣೆ ಪೊಲೀಸರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ಜಾಮೀನು ಅರ್ಜಿಯಲ್ಲಿ, ನಟಿ ಸಂಜನಾ ವಿರುದ್ಧದ ಆರೋಪಕ್ಕೆ ಯಾವುದೇ ಆಧಾರವಿಲ್ಲ. ಅವರ ಹೆಸರನ್ನು ಎಫ್ಐಆರ್ ನಲ್ಲಿ ನಮೂದಿಸಿಲ್ಲ. ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಸಂದರ್ಭದಲ್ಲಿಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಹಾಗಿದ್ರೂ ಕನ್ನಡ ಮತ್ತು ತೆಲುಗು ಚಿತ್ರರಂಗದಲ್ಲಿ ಖ್ಯಾತಿ ಹೊಂದಿರುವ ನಟಿಯನ್ನು ಪೊಲೀಸರು ಬಂಧಿಸಿರುವುದು ಹಾಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದು ಸರಿಯಲ್ಲ. ಹೀಗಾಗಿ ನಟಿ ಸಂಜನಾಗೆ ಜಾಮೀನು ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.
ನ್ಯಾಯಾಂಗ ಬಂಧನ ವಿಸ್ತರಣೆ: ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ಹಾಗೂ ಸಂಜನಾಗೆ ವಿಧಿಸಿದ್ದ ನ್ಯಾಯಾಂಗ ಬಂಧನವನ್ನು ಎನ್ಡಿಪಿಎಸ್ ವಿಶೇಷ ನ್ಯಾಯಾಲಯ ಅಕ್ಟೋಬರ್ 23ರವರೆಗೆ ವಿಸ್ತರಿಸಿ ಆದೇಶ ಹೊರಿಡಿಸಿದೆ. ಹೀಗಾಗಿ ಹೈಕೋರ್ಟ್ ನಲ್ಲಿ ಜಾಮೀನು ಸಿಗುವವರೆಗೂ ನಟಿ ಮಣಿಯರ ಜೈಲು ವಾಸ ಮುಂದುವರೆಯಲಿದೆ.