ಬೆಂಗಳೂರು : ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯಲಿರುವ ಹಿನ್ನೆಲೆ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸಲು ಎಲ್ಲಾ ವಲಯದ ಐಜಿಪಿಗಳು ಹಾಗೂ ಎಸ್ಪಿಗಳಿಗೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಮರ್ ಕುಮಾರ್ ಪಾಂಡೆ ಸೂಚನೆ ನೀಡಿದ್ದಾರೆ.
ಆ ದಿನ ರಾಜ್ಯದ ವಿವಿಧ ದೇವಸ್ಥಾನಗಳಲ್ಲೂ ಪೂಜೆ ನಡೆಸಿ, ಸಿಹಿ ಹಂಚಲಿದ್ದಾರೆ. ಈ ವೇಳೆ ಯಾವುದೇ ಅಹಿತರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು. ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಬೇಕು. ಭೂಮಿ ಪೂಜೆ ನಡೆಯುವ ದಿನ ಕೆಲವು ಮತೀಯ ಸಂಘಟನೆಗಳು ಗಲಭೆ ಸೃಷ್ಟಿಸುವ ಸಾಧ್ಯತೆಯಿದೆ. ಹೀಗಾಗಿ ತೀವ್ರ ನಿಗಾವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಭದ್ರತಾ ಕ್ರಮಗಳ ಕುರಿತು ಚರ್ಚಿಸಲು ನಾಳೆ ಬೆಳಗ್ಗೆ 11.30 ಕ್ಕೆ ಎಡಿಜಿಪಿ ಅಮರ್ ಕುಮಾರ್ ಪಾಂಡೆ, ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಭದ್ರತೆ ಕಾಪಾಡಲು ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬುವುದರ ಕುರಿತು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚನೆ ನೀಡಲಿದ್ದಾರೆ.