ಬೆಂಗಳೂರು : ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿರುವ ಆದಿತ್ಯ ಆಳ್ವ ವಿರುದ್ಧ ದಾಖಲಿಸಿರುವ ಎಫ್ಐಆರ್ ರದ್ದು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ನಗರ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದ್ದು, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದೆ.
ಡ್ರಗ್ಸ್ ಜಾಲದಲ್ಲಿ ನಂಟು ಹೊಂದಿರುವ ಆರೋಪದಡಿ ದಾಖಲಿಸಿರುವ ಎಫ್ಐಆರ್ನಲ್ಲಿ ಆದಿತ್ಯ ಆಳ್ವ ಆರನೇ ಆರೋಪಿಯಾಗಿದ್ದು, ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ಇಂದು ನ್ಯಾ. ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠ, ಪ್ರತಿವಾದಿಗಳಾದ ಕಾಟನ್ ಪೇಟೆ ಠಾಣೆ ಪೊಲೀಸ್ ಇನ್ಸಪೆಕ್ಟರ್ ಹಾಗೂ ದೂರುದಾರರಾದ ಕೇಂದ್ರ ಅಪರಾಧ ವಿಭಾಗದ ಎಸಿಪಿ ಕೆ.ಸಿ ಗೌತಮ್ ಅವರಿಗೆ ನೋಟಿಸ್ ಜಾರಿ ಮಾಡಿತು. ಅಲ್ಲದೇ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ, ವಿಚಾರಣೆ ಮುಂದೂಡಿತು.