ಬೆಂಗಳೂರು : ಹೈಕೋರ್ಟ್ ಕಟ್ಟಡದ ನೆಲಮಹಡಿಯಲ್ಲಿ ಇರುವ ಕಚೇರಿಗಳನ್ನು ಸ್ಥಳಾಂತರಿಸಲು ಸೂಕ್ತ ಆದೇಶ ಹೊರಡಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಾಲ್ಕು ವಾರಗಳ ಕಾಲ ಮುಂದೂಡಿದೆ.
ಬೆಂಗಳೂರಿನ ಹೈಕೋರ್ಟ್ ಕಟ್ಟಡದ ನೆಲಮಹಡಿಯಲ್ಲಿ ಇರುವ ಕಚೇರಿಗಳನ್ನು ಸ್ಥಳಾಂತರಿಸಲು ಸೂಕ್ತ ಆದೇಶ ಹೊರಡಿಸುವಂತೆ ಕೋರಿ ವಕೀಲ ಎಲ್ ರಮೇಶ್ ನಾಯಕ್ ಮತ್ತು ಹೈಕೋರ್ಟ್ ಕಟ್ಟಡ ಸಂಕೀರ್ಣಕ್ಕೆ ಬೆಂಗಳೂರಿನ ಕೇಂದ್ರ ಭಾಗದಲ್ಲಿ 30ಕ್ಕೂ ಅಧಿಕ ಎಕರೆ ಜಮೀನು ಮಂಜೂರು ಮಾಡಲು ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ಶರಣ ದೇಸಾಯಿ ಎಂಬುವವರು ಪ್ರತ್ಯೇಕವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ಮುಂದೂಡಿತು.
ವಿಚಾರಣೆ ವೇಳೆ ಹೈಕೋರ್ಟ್‌ನ ಆಡಳಿತ ಪರ ವಕೀಲರು ಹಾಜರಾಗಿ, ಹೈಕೋರ್ಟ್ಗೆ ಪರ್ಯಾಯ ಸ್ಥಳಾವಕಾಶ ಒದಗಿಸುವ ವಿಚಾರ ಸಂಬಂಧ ರಾಜ್ಯ ಸರ್ಕಾರದ ಪ್ರಸ್ತಾವನೆ ಹೈಕೋರ್ಟ್‌ನ ಕಟ್ಟಡ ಸಮಿತಿಯ ಪರಿಶೀಲನೆ ನಡೆಸುತ್ತಿದೆ. ಈ ಸಮಿತಿಯಲ್ಲಿ ಒಂದಿಷ್ಟು ಬದಲಾವಣೆಗಳು ಆಗಿರುವ ಹಿನ್ನೆಲೆಯಲ್ಲಿ ಸ್ವಲ್ಪ ಕಾಲಾವಕಾಶ ಬೇಕು ಎಂದು ಕೋರಿದರು. ಈ ಅಂಶ ದಾಖಲಿಸಿಕೊಂಡ ಪೀಠ ವಿಚಾರಣೆ ಮುಂದೂಡಿತು.
ಕಳೆದ ವಿಚಾರಣೆ ವೇಳೆ, ಹೈಕೋರ್ಟ್ ಆಡಳಿತ ವಿಭಾಗದ ಪರ ಹಾಜರಾದ ವಕೀಲರು, ಹೈಕೋರ್ಟ್ ವಿಸ್ತರಣೆಗೆ ಸ್ಥಳಾವಕಾಶ ಒದಗಿಸುವ ಸಂಬಂಧ ಮೂರು ಪ್ರಸ್ತಾವನೆಗಳನ್ನು ಸರ್ಕಾರ ಸಲ್ಲಿಸಿದೆ. ಅವುಗಳನ್ನು ಹೈಕೋರ್ಟ್ ಕಟ್ಟಡ ಸಮಿತಿ ಪರಿಶೀಲನೆ ನಡೆಸಲಿದೆ. ಹೈಕೋರ್ಟ್ ಆ.14 ರಂದು ಹೊರಡಿಸಿದ ಆದೇಶದಂತೆ ಸರ್ಕಾರವು ಮೂರು ಪ್ರಸ್ತಾವನೆಗಳನ್ನು ಸಲ್ಲಿಸಬೇಕು. ಆ ಮೂರು ಪ್ರಸ್ತಾವನೆಗಳನ್ನು ಹೈಕೋರ್ಟ್ ಕಟ್ಟಡ ಸಮಿತಿ ಪರಿಶೀಲಿಸಿ, ತನ್ನ ಅಭಿಪ್ರಾಯಗಳೊಂದಿಗೆ ಮುಖ್ಯಮಂತ್ರಿಗಳಿಗೆ ಸಲ್ಲಿಸಬೇಕಿದೆ. ನಂತರ ಮುಖ್ಯಮಂತ್ರಿಗಳು ಅಂತಿಮ ತೀರ್ಮಾನ ತೆಗೆದುಕೊಂಡು, ಅದನ್ನು ನ್ಯಾಯಾಲಯದ (ಹೈಕೋರ್ಟ್) ಮುಂದಿಡಬೇಕಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು.
ಸರ್ಕಾರದ ರಾಜ್ಯ ಹೆಚ್ಚುವರಿ ಅಡ್ವೋಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಹಾಜರಾಗಿ, ಈ ಮೂರು ಪ್ರಸ್ತಾವನೆಯಲ್ಲದೆ ಹೆಚ್ಚುವರಿಯಾಗಿ ನಾಲ್ಕನೆ ಪ್ರಸ್ತಾವನೆ ಸಹ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಲ್ಲಿಕೆಯಾಗಿದೆ. ಹತ್ತು ಮಹಡಿಗಳ ಕಟ್ಟಡಗಳನ್ನು ನಿರ್ಮಿಸುವುದೇ ನಾಲ್ಕನೇ ಪ್ರಸ್ತಾವನೆಯಾಗಿದೆ. ಮೊದಲಿಗೆ ಆರು ಮಹಡಿಗಳ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವನೆ ಇತ್ತು. ಆದರೆ, ಖುದ್ದು ಮುಖ್ಯ ಕಾರ್ಯದರ್ಶಿಗಳೇ ಲಂಬವಾಗಿ 10 ಮಹಡಿಗಳ ಕಟ್ಟಡವನ್ನು ಏಕೆ ನಿರ್ಮಾಣ ಮಾಡಬಾರದು ಎಂಬುದಾಗಿ ಕೇಳಿದ್ದಾರೆ. ಅದರಂತೆ ಹೊಸದಾಗಿ ಹತ್ತು ಮಹಡಿಗಳ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವನೆಯನ್ನು ಮುಖ್ಯ ಕಾರ್ಯದರ್ಶಿಗಳಿಗೆ ಸಲ್ಲಿಸಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದರು.
ಇದನ್ನೂ ಓದಿ : ಜಯನಗರ ಶಾಪಿಂಗ್ ಕಾಂಪ್ಲೆಕ್ಸ್ ಅಕ್ರಮ ಮಳಿಗೆ ತೆರವು ಪ್ರಕರಣ: ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಹೈಕೋರ್ಟ್ ನೋಟಿಸ್