ಬೆಂಗಳೂರು: ಪಿಎಸ್ಐ ಪರೀಕ್ಷಾ ನೇಮಕಾತಿಯಲ್ಲಿ ಅಕ್ರಮ ಪ್ರಕರಣದಲ್ಲಿ 35ನೇ ಆರೋಪಿಯಾಗಿರುವ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಒಂದನೇ ಎಸಿಎಂಎಂ ನ್ಯಾಯಾಲಯ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.
ಇಂದಿಗೆ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿ ಅಂತ್ಯ ಹಿನ್ನೆಲೆ, ಒಂದನೇ ಎಸಿಎಂಎಂ ನ್ಯಾಯಾಲಯದ ಮುಂದೆ ಇಂದು ಅಮೃತ್ ಪಾಲ್ ಅವರನ್ನು ಸಿಐಡಿ ಅಧಿಕಾರಿಗಳು ಹಾಜರು ಪಡಿಸಿದರು. ವಿಶೇಷ ಅಭಿಯೋಜಕರಾಗಿ ನೇಮಕರಾದ ಪಿ. ಪ್ರಸನ್ನ ಕುಮಾರ್ ಸಿಐಡಿ ಪರ ವಾದ ಮಂಡಿಸಿದರು. ಪಿಎಸ್ಐ ಅಕ್ರಮ ಪ್ರಕರಣದಲ್ಲಿ ಬಂಧಿತರಾದ ಅಮೃತ್ ಪಾಲ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಮಂಪರು ಪರೀಕ್ಷೆ ನಡೆಸುವ ಅಗತ್ಯವಿದ್ದು ಅನುಮತಿ ನೀಡಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪಾಲ್ ಪರ ವಕೀಲರು ಪೌಲ್ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಂತದಲ್ಲಿ ಮಂಪರು ಪರೀಕ್ಷೆಗೆ ಅನುಮತಿ ನೀಡುವುದು ತರವಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ನ್ಯಾಯಾಂಗ ಬಂಧನದ ಅವಧಿಯಲ್ಲಿ ಮನೆ ಊಟ ಹಾಗೂ ಕುಟುಂಬ ಸದಸ್ಯರೊಂದಿಗೆ 30 ನಿಮಿಷ ಭೇಟಿಗೆ ಅವಕಾಶ ನೀಡಬೇಕು. ಹಾಗೂ ಅನಾರೋಗ್ಯ ಹಿನ್ನೆಲೆಯಲ್ಲಿ, ಸೂಕ್ತ ವೈದ್ಯಕೀಯ ಚಿಕಿತ್ಸೆಗೆ ಅನುವು ಮಾಡಿಕೊಂಡುವಂತೆ ಮನವಿ ಮಾಡಿದರು.
ಇದನ್ನೂ ಓದಿ: ವಿಡಿಯೋ: ನೀರಿನ ರಭಸದ ನಡುವೆಯೂ ಬ್ರಿಡ್ಜ್ ಗೇಟ್ ತೆರೆಯುವ ಯತ್ನ
ಇದಕ್ಕೆ ಪ್ರತಿಕ್ರಿಯಿಸಿದ ಪಿ ಪ್ರಸನ್ನ ಕುಮಾರ್, ಜೈಲಿನ ನಿಯಾಮವಳಿ ಪ್ರಕಾರವೇ ಸವಲತ್ತು ನೀಡಲಿ ಎಂದರು. ಇದನ್ನು ನ್ಯಾಯಾಲಯ ಪುರಸ್ಕರಿಸಿ ನಾಳೆಗೆ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿತು.