ಬೆಂಗಳೂರು : ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಹಾಗೂ ಅಂತರಗಂಗಾ ಸೂಕ್ಷ್ಮ ನೀರಾವರಿ ನಿಗಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಇಂದು ನಡೆದ ಸಭೆಯಲ್ಲಿ 2019-20 ನೇ ಸಾಲಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ಒಟ್ಟು 3,15,812 ಕ್ವಿಂಟಲ್ ತೊಗರಿಯನ್ನು ಮಂಡಳಿ ರೈತರಿಂದ ನೇರವಾಗಿ ಖರೀದಿಸಿದ್ದು, 1,92,64,532 ರೂ. ಹಣವನ್ನು ಅವರ ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ. ಇದರಿಂದಾಗಿ ಮಂಡಳಿಗೆ ಸೇವಾ ಶುಲ್ಕದಿಂದ ಲಾಭವಾಗಿದ್ದು, ಕಳೆದ ಬಾರಿಗೆ ಹೋಲಿಸಿದರೆ ಮಂಡಳಿಗೆ ಈ ಬಾರಿ ದುಪ್ಪಟ್ಟು ಲಾಭವಾಗಿದೆ ಎಂದು ಮಂಡಳಿಯ ಲಾಭದಾಯಕ ಕೆಲಸಕ್ಕೆ ಕೃಷಿ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
ಸೂಕ್ಷ್ಮ ನೀರಾವರಿಯ ವಿವಿಧ ಕಾರ್ಯಕ್ರಮಗಳನ್ನು ಪ್ರಸ್ತುತ ಕೃಷಿ, ತೋಟಗಾರಿಕೆ, ರೇಷ್ಮೆ ಹಾಗೂ ಜಲಸಂಪನ್ಮೂಲ ಇಲಾಖೆಗಳಲ್ಲಿ ನಿರ್ವಹಿಸಲಾಗುತ್ತಿದೆ. ಸೂಕ್ಷ್ಮ ನೀರಾವರಿ ಯೋಜನೆಗಳ ಉಪಯೋಗ ಕುರಿತು ರೈತ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು. ಸೂಕ್ಷ್ಮ ನೀರಾವರಿ ಕಾರ್ಯಕ್ರಮಗಳಿಗೆ ಪ್ರತ್ಯೇಕವಾಗಿ ಒತ್ತು ನೀಡಲು ಯೋಜನೆಗಳನ್ನು ಕರ್ನಾಟಕ ಅಂತರಗಂಗಾ ಸೂಕ್ಷ್ಮ ನಿಗಮದ ಮೂಲಕ ಅನುಷ್ಠಾನಗೊಳಿಸುವುದು ಸೂಕ್ತ ಎಂದು ಸಚಿವರು ಹೇಳಿದರು.
ಸಭೆಯಲ್ಲಿ ಭಾಗವಹಿಸಿದ್ದ ತೋಟಗಾರಿಕಾ ಹಾಗೂ ರೇಷ್ಮೆ ಇಲಾಖೆ ಸಚಿವ ನಾರಾಯಣಗೌಡ ಮಾತನಾಡಿ, ತೋಟಗಾರಿಕೆ ಇಲಾಖೆಯ ನೀರಾವರಿ ಯೋಜನೆಗಳನ್ನು ಹಸ್ತಾಂತರಿಸುವ ಬಗ್ಗೆ ತಮ್ಮ ವ್ಯಾಪ್ತಿಯ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಲಾಗುವುದು ಎಂದರು.
ಸಭೆಯಲ್ಲಿ ಹಿರಿಯ ಐಎಎಸ್ ಅಧಿಕಾರಿ ವಂದಿತಾ ಶರ್ಮಾ, ಕೃಷಿ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜಕುಮಾರ್ ಖತ್ರಿ, ಆಯುಕ್ತ ಬ್ರಿಜೇಶ್ ಕುಮಾರ್, ತೊಗರಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಕರುಣಾಕರ ರೆಡ್ಡಿ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.