ಬೆಂಗಳೂರು: ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಾನ್ಸೂನ್ ಚುರುಕಾಗಿದ್ದು, ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕರಾದ ಸಿ. ಎಸ್. ಪಾಟೀಲ್ ತಿಳಿಸಿದ್ದಾರೆ.
ಬಂಗಾಳ ಉಪಸಾಗರದ ಈಶಾನ್ಯ ಭಾಗದಲ್ಲಿ ಸೆ. 20 ರಂದು ವಾಯುಭಾರ ಕುಸಿತವಾಗುವ ಹೆಚ್ಚಿನ ಸಾಧ್ಯತೆ ಇದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸೆ.18 ರಿಂದ 22 ರವರೆಗೆ ವ್ಯಾಪಕ ಮಳೆಯಾಗಲಿದ್ದು, ಸೆ.20 ಹಾಗೂ 21 ರಂದು 20 ಸೆಂ. ಮೀಟರ್ಗಿಂತ ಅಧಿಕ ಮಳೆಯಾಗುವುದರಿಂದ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ನಾಳೆ ಹಾಗೂ 22 ರಂದು ಅತಿಯಾದ ಮಳೆಯಾಗುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ಸಿ. ಎಸ್ ಪಾಟೀಲ್ ತಿಳಿಸಿದರು.
ಉತ್ತರ ಕರ್ನಾಟಕ ಜಿಲ್ಲೆಗಳಾದ ಬೀದರ್, ಯಾದಗಿರಿ, ರಾಯಚೂರು, ಕಲಬುರಗಿ, ವಿಜಯಪುರ, ಕೊಪ್ಪಳ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಸೆ.18,19 ರಂದು ಹಳದಿ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಹಾವೇರಿ, ಧಾರವಾಡದಲ್ಲಿ ಸೆ.20 ಹಾಗೂ 21 ರಂದು ಆರೆಂಜ್ ಅಲರ್ಟ್ ಕೊಡಲಾಗಿದೆ.
ದಕ್ಷಿಣ ಒಳನಾಡಿನಲ್ಲಿ ಸೆ.20 ರಿಂದ 22ರವರೆಗೆ ವ್ಯಾಪಕ ಮಳೆಯಾಗಲಿದೆ. ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಸೆ. 21 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.