ಬೆಂಗಳೂರು: ಕೊರೊನಾ ನಿಯಂತ್ರಣ ಕುರಿತು ಚರ್ಚಿಸಲು ಭಾನುವಾರ ಸಂಜೆ 4 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರೆಯಲಾಗಿದ್ದ ಉಭಯ ಸದನಗಳ ಸರ್ವಪಕ್ಷ ಸಭೆಯನ್ನು ಮುಂದೂಡಲಾಗಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಸಿಎಂ ಯಡಿಯೂರಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆ ಭಾನುವಾರ ಕರೆಯಲಾಗಿದ್ದ ಸರ್ವಪಕ್ಷ ಸಭೆಯನ್ನು ಸಿಎಂ ಯಡಿಯೂರಪ್ಪ ಮುಂದೂಡಿಕೆ ಮಾಡಿದ್ದಾರೆ.
ಸದ್ಯದಲ್ಲೇ ವಿಡಿಯೋ ಸಂವಾದದ ಮೂಲಕ ಸಭೆ ನಡೆಸುವುದರ ಬಗ್ಗೆ ಅಥವಾ ಕೊರೊನಾದಿಂದ ಗುಣಮುಖರಾದ ನಂತರ ಸರ್ವಪಕ್ಷ ಸಭೆ ನಡೆಸುವ ಸಾಧ್ಯತೆ ಇದೆ. ಅಲ್ಲಿಯವರೆಗೂ ಸಿಎಂ ಯಡಿಯೂರಪ್ಪ ಆಸ್ಪತ್ರೆಯಿಂದಲೇ ಕಾಲ ಕಾಲಕ್ಕೆ ಮಾಹಿತಿ ಪಡೆದು ಕೊರೊನಾ ನಿಯಂತ್ರಣ ಕುರಿತು ಮುಂದಿನ ಕ್ರಮಗಳ ಬಗ್ಗೆ ನಿರ್ದೇಶನ ನೀಡಲಿದ್ದಾರೆ.