ಬೆಂಗಳೂರು : ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಪಂಚಾಯಿತಿ ಅಭಿವೃದ್ಧಿ (ಪಿಡಿಒ) ಅಧಿಕಾರಿಗಳ ನೇಮಕಾತಿಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಸಭೆಯಲ್ಲಿ ಇಂದು ಭರವಸೆ ನೀಡಿದರು.
ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಬಸನಗೌಡ ದದ್ದಲ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗ್ರಾಮ ಪಂಚಾಯಿತಿಗಳಿಗೆ 6021 ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 5361 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಪ್ರಸ್ತುತ 660 ಹುದ್ದೆಗಳು ಖಾಲಿ ಇವೆ. ನೇರ ನೇಮಕಾತಿ ಕೋಟಾ ಅಡಿಯಲ್ಲಿ 385 ಹುದ್ದೆಗಳು ಖಾಲಿ ಇದ್ದು, ಈ ಪೈಕಿ 150 ಹುದ್ದೆಗಳ ನೇಮಕಾತಿ ಪ್ರಗತಿಯಲ್ಲಿದೆ ಎಂದರು.
ನೇರ ನೇಮಕಾತಿ ಅಡಿಯಲ್ಲಿ ಬರುವ ಎಲ್ಲಾ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು. ವಿಶೇಷವಾಗಿ 371ಜೆ ವ್ಯಾಪ್ತಿಗೆ ಒಳಪಡುವ ಹೈದರಾಬಾದ್ ಕರ್ನಾಟಕಕ್ಕೆ ಅಗತ್ಯವಿರುವ ಹುದ್ದೆಗಳನ್ನು ನೇಮಕ ಮಾಡಲಾಗುವುದು ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿಗಳಿಗೆ ಕಾರ್ಯದರ್ಶಿ ಗ್ರೇಡ್ 1 ಅಡಿಯಲ್ಲಿ 2194 ಹುದ್ದೆಗಳು ಮಂಜೂರಾಗಿವೆ. ಈ ಪೈಕಿ 1590 ಹುದ್ದೆ ಭರ್ತಿಯಾಗಿವೆ. 604 ಹುದ್ದೆಗಳು ಖಾಲಿ ಇವೆ. ಅದೇ ರೀತಿ ಗ್ರೇಡ್ 2 ಅಡಿಯಲ್ಲಿ 3827 ಹುದ್ದೆ ಮಂಜೂರಾಗಿದ್ದರೆ, 3108 ಹುದ್ದೆಗಳು ಭರ್ತಿಯಾಗಿವೆ. 719 ಹುದ್ದೆಗಳು ಖಾಲಿ ಇವೆ. ದ್ವಿತೀಯ ದರ್ಜೆ ಲೆಕ್ಕಸಹಾಯಕ ಹುದ್ದೆಗಳು 2579 ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 2234 ಹುದ್ದೆಗಳನ್ನು ತುಂಬಲಾಗಿದೆ. 345 ಹುದ್ದೆಗಳು ಖಾಲಿ ಇದ್ದು, ಎಲ್ಲಾ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಹೇಳಿದರು.
ವಿದ್ಯಾರ್ಥಿ ನಿಲಯಗಳಿಗೆ ಮೂಲಸೌಕರ್ಯ ಒದಗಿಸಲು ಸೂಕ್ತ ಕ್ರಮ : ಹಿಂದುಳಿದ ವರ್ಗಗಳ ವಸತಿ ನಿಲಯಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸುವ ಸಂಬಂಧ ಹಾಗೂ ಮೂಲಸೌಕರ್ಯ ಒದಗಿಸಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ಎಸ್. ತಂಗಡಗಿ ಅವರು, ಪ್ರಶ್ನೋತ್ತರ ವೇಳೆ ಬಿಜೆಪಿ ಸದಸ್ಯ ಕಿರಣ್ ಕುಮಾರ್ ಕೊಡ್ಗಿ ಅವರ ಪ್ರಶ್ನೆಗೆ ಉತ್ತರಿಸಿದರು. ವಸತಿ ನಿಲಯಗಳಿಗೆ ಪ್ರವೇಶ ಕೋರಿ ಸಾವಿರಾರು ಅರ್ಜಿಗಳು ಬಂದಿವೆ. ಹೀಗಿರುವ ನಿಲಯಗಳಲ್ಲಿ ಎಲ್ಲರಿಗೂ ಅವಕಾಶ ಕೊಡುವುದು ಕಷ್ಟವಾಗಿದ್ದು, ಈ ಸಮಸ್ಯೆ ಬಗೆಹರಿಸಲು ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿನ 160 ಕಟ್ಟಡಗಳನ್ನು ತಮ್ಮ ಇಲಾಖೆಗೆ ಪಡೆಯಲಾಗುತ್ತಿದೆ. ಇದರಲ್ಲಿ ಸಾಧ್ಯವಾದಷ್ಟು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜುಗಳು ಆರಂಭವಾದ ಕೂಡಲೇ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ನೀಡುವುದರ ಜೊತೆಗೆ ಹಾಸ್ಟೆಲ್ಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಸೇರ್ಪಡೆ ಮಾಡಿಕೊಂಡಲ್ಲಿ ಮೂಲಸೌಲಭ್ಯಗಳನ್ನು ಒದಗಿಸಬೇಕಾಗುತ್ತದೆ. ಈ ಎಲ್ಲ ವಿಚಾರಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಹಾಸ್ಟೆಲ್ ಸಿಗದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಮಾಸಿಕ 1500 ರೂ. ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸದನಕ್ಕೆ ಭರವಸೆ ನೀಡಿದರು.
ಇದನ್ನೂ ಓದಿ: ಐದೂ ಗ್ಯಾರಂಟಿಯನ್ನು ಇದೇ ಆರ್ಥಿಕ ವರ್ಷದಲ್ಲಿ ಈಡೇರಿಸುತ್ತೇವೆ: ಸಿಎಂ ಸಿದ್ದರಾಮಯ್ಯ