ಬೆಂಗಳೂರು: ಕಳೆದ ವಿಧಾನಸಭೆ ಉಪಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಸೆ.1ರಂದು ವಿಚಾರಣೆಗೆ ಹಾಜರಾಗುವಂತೆ ಗೋಕಾಕ್ ಜೆಎಂಎಫ್ ಸಿ ನ್ಯಾಯಾಲಯ ಹೊರಡಿಸಿರುವ ಸಮನ್ಸ್ ರದ್ದು ಕೋರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಧಾರವಾಡ ಹೈಕೋರ್ಟ್ ಪೀಠಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆಗಸ್ಟ್ 14ರಂದು ಈ ಅರ್ಜಿ ದಾಖಲಿಸಿದ್ದು, ಅರ್ಜಿ ವಿಚಾರಣೆಗೆ ಇನ್ನು ದಿನಾಂಕ ನಿಗದಿಯಾಗಬೇಕಿದೆ. ಅರ್ಜಿದಾರರ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ಹಾಗೂ ಸಂದೀಪ್ ಪಾಟೀಲ್ ವಾದ ಮಂಡಿಸಲಿದ್ದಾರೆ.
ಪ್ರಕರಣದ ಹಿನ್ನೆಲೆ:
ಕಳೆದ ವರ್ಷ ನಡೆದ ಉಪ ಚುನಾವಣೆ ಸಂದರ್ಭದಲ್ಲಿ ಕಾಗವಾಡ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪ ಕೇಳಿಬಂದಿತ್ತು. ಲಿಂಗಾಯತ ಮತಗಳು ವಿಭಜನೆಯಾಗದಂತೆ ನೋಡಿಕೊಳ್ಳಲು ಕರೆ ನೀಡಿದ್ದ ಆರೋಪದಡಿ ಗೋಕಾಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ್ದ ಪೊಲೀಸರು 2020ರ ಜೂನ್ 25ರಂದು ಸ್ಛಳೀಯ ಜೆಎಂಎಫ್ ಸಿ ಕೋರ್ಟ್ ಗೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಆದರೆ ಬಿ ರಿಪೋರ್ಟ್ ತಿರಸ್ಕರಿಸಿರುವ ನ್ಯಾಯಾಲಯ ವಿಚಾರಣೆಗೆ ಹಾಜರಾಗುವಂತೆ ಬಿ.ಎಸ್.ವೈ ಅವರಿಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯದ ಸಮನ್ಸ್ ರದ್ದುಗೊಳಿಸುವಂತೆ ಕೋರಿ ಧಾರವಾಡ ಪೀಠದಲ್ಲಿ ಅರ್ಜಿ ಸಲ್ಲಿಸಲಾಗಿದೆ.