ಬೆಂಗಳೂರು: ಆರೋಗ್ಯ ಇಲಾಖೆ ಹೊಸದಾಗಿ 120 ಆಂಬುಲೆನ್ಸ್‌ಗಳನ್ನು ಖರೀದಿಸಲು ಕರೆದಿರುವ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಒಂದು ಕಂಪನಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಆಕ್ಷೇಪಿಸಿ ಸಲ್ಲಿಸಿದ್ದ ಅರ್ಜಿ ಪರಿಗಣಿಸಲು ಹೈಕೋರ್ಟ್ ನಿರಾಕರಿಸಿದೆ.
ಈ ಕುರಿತು ನಗರದ ಎಸ್. ವಿ. ಸಿಂಗ್ರೇಗೌಡ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಶ್ಯನಿನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, 120 ಅ್ಯಂಬುಲೆನ್ಸ್‌ಗಳನ್ನು ಖರೀದಿಸಲು ಆರೋಗ್ಯ ಇಲಾಖೆ ಟೆಂಡರ್ ಕರೆದಿದ್ದು, ಅದರಲ್ಲಿ ತಾಂತ್ರಿಕ ಕಾರಣಗಳನ್ನಿಟ್ಟು ಒಂದು ಕಂಪನಿಗೆ ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಉಳಿದ ವಾಹನ ತಯಾರಿಕಾ ಕಂಪನಿಗಳಿಗೆ ಅವಕಾಶ ತಪ್ಪಿಸಲಾಗಿದೆ. ಟೆಂಡರ್ ಬಗ್ಗೆ ವ್ಯಾಪಕ ಪ್ರಚಾರವನ್ನು ಸಹ ನೀಡಿಲ್ಲ ಎಂದು ಆರೋಪಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಸದ್ಯ ಆಂಬುಲೆನ್ಸ್‌ಗಳ ತುರ್ತು ಅಗತ್ಯವಿದೆ. ಇಂಥ ಸಂದರ್ಭದಲ್ಲಿ ಸರ್ಕಾರದ ಆಂಬುಲೆನ್ಸ್ ಖರೀದಿ ವಿಚಾರದಲ್ಲಿ ಕೋರ್ಟ್ ಮಧ್ಯ ಪ್ರವೇಶಿಸುವುದು ಉಚಿತವಲ್ಲ. ಆಂಬುಲೆನ್ಸ್‌ಗಳು ಅತ್ಯಗತ್ಯ ಎಂಬಂಥ ಪರಿಸ್ಥಿತಿಯಲ್ಲಿ ವಾಹನಗಳ ತಾಂತ್ರಿಕ ವಿಷಯಗಳನ್ನು ವಿವಾದವಾಗಿ ಪರಿಗಣಿಸಿ ಅರ್ಜಿ ವಿಚಾರಣೆ ಕೈಗೆತ್ತಿಕೊಂಡರೆ ಖರೀದಿ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಹಾಗಾದಲ್ಲಿ ಸಾರ್ವಜನಿಕರಿಗೆ ಸಮಸ್ಯೆಯಾಗಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿ, ಅರ್ಜಿ ಇತ್ಯರ್ಥಪಡಿಸಿ ಆದೇಶಿಸಿತು.