ಬೆಂಗಳೂರು: ವಿವಿಧ ಕಾರ್ಯಗಳಲ್ಲಿ ಭಾಗವಹಿಸುವ ಸಲುವಾಗಿ ಕಳೆದ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾದ ಖೇಲೋ ಇಂಡಿಯಾ 2021 ವಿಶ್ವವಿದ್ಯಾಲಯ ಕ್ರೀಡೆಗಳ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ, ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ನವದೆಹಲಿಗೆ ಹಿಂದಿರುಗಿದರು.


ಕೇಂದ್ರ ಸರ್ಕಾರದ ಗೃಹ ಸಚಿವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆತ್ಮೀಯವಾಗಿ ಬೀಳ್ಕೊಟ್ಟರು. ಈ ಸಮಯದಲ್ಲಿ, ಕೇಂದ್ರದ ಸಂಸದೀಯ ವ್ಯವಹಾರ, ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಹ್ಲಾದ ಜೋಶಿ, ರಾಜ್ಯ ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವರಾದ ಗೋವಿಂದ ಎಂ ಕಾರಜೋಳ, ಗೃಹ ಸಚಿವ ಆರಗ ಜ್ಞಾನೇಂದ್ರ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಕಮಲ್ ಪಂತ್, ರಾಜ್ಯ ಬಿ.ಜೆ.ಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಸೇರಿದಂತೆ ಸಚಿವರು, ಶಾಸಕರು, ಬಿ.ಜೆ.ಪಿಯ ಹಿರಿಯ ಕಾರ್ಯಕರ್ತರು, ಗಣ್ಯರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.