ಬೆಂಗಳೂರು: ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಿರುವ ಪ್ರತಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಪ್ರತಿ ಕೆ.ಜಿಗೆ 34 ರೂ. ಯಂತೆ ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ಹಣ ವರ್ಗಾಯಿಸಲು ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು 5 ಕೆ.ಜಿ ಆಹಾರ ಧಾನ್ಯದ ಬದಲಾಗಿ ಪ್ರತಿ ಕೆ.ಜಿಗೆ ರೂ.34 ಯಂತೆ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಹಣ ವರ್ಗಾವಣೆಯಾಗಲಿದೆ.
ಕುಟುಂಬದ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಒಟ್ಟು 10 ಕೆ.ಜಿ. ಆಹಾರ ಧಾನ್ಯವನ್ನು ಉಚಿತವಾಗಿ ವಿತರಿಸುವುದಾಗಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ನೀಡಿತ್ತು. ಈ ಸಂಬಂಧ ಮೊದಲ ಸಂಪುಟ ಸಭೆಯಲ್ಲಿ ತಾತ್ವಿಕ ಅನುಮೋದನೆ ನೀಡಲಾಗಿತ್ತು. ಅದರಂತೆ, ಸರ್ಕಾರಕ್ಕೆ ಪ್ರತಿ ತಿಂಗಳು ಹೆಚ್ಚುವರಿಯಾಗಿ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿಯ ಅಗತ್ಯವಿದ್ದು, ಸದ್ಯ ಅಕ್ಕಿಯನ್ನು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿ ಒದಗಿಸುವಂತೆ ಕೇಂದ್ರ ಸರ್ಕಾರದ ಆಹಾರ ಮತ್ತು ಸಾರ್ವಜನಿಕ ವಿತರಣೆ ಇಲಾಖೆಗೆ ಕೋರಲಾಗಿತ್ತು. ಭಾರತ ಆಹಾರ ನಿಗಮ ಪ್ರಾದೇಶಿಕ ಕಚೇರಿ ಎಂಡಿ ಪತ್ರದಲ್ಲಿ ರಾಜ್ಯ ಸರ್ಕಾರ ಕೋರಿರುವ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿ (ಇ-ಹರಾಜು) ರಹಿತವಾಗಿ ಒದಗಿಸುವುದಾಗಿ ತಿಳಿಸಿದ್ದರು.
ಆದರೆ ಇದಕ್ಕೆ ಪ್ರತಿಯಾಗಿ ಕೇಂದ್ರ ಸರ್ಕಾರ ಪತ್ರ ಬರೆದು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿ ರಾಜ್ಯ ಸರ್ಕಾರಗಳಿಗೆ ಗೋಧಿ ಮತ್ತು ಅಕ್ಕಿ ಮಾರಾಟವನ್ನು ಸ್ಥಗಿತಗೊಳಿಸಿರುವುದಾಗಿ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿಯಾಗಿ 5 ಕೆ.ಜಿ. ಆಹಾರ ಧಾನ್ಯವನ್ನು ಉಚಿತವಾಗಿ ವಿತರಿಸಲು ಸರ್ಕಾರ ನೀಡಲು ಅಗತ್ಯವಿರುವ ಆಹಾರ ಧಾನ್ಯವನ್ನು ಮುಕ್ತ ಮಾರುಕಟ್ಟೆಯಿಂದ ಖರೀದಿಸಲು ಮುಕ್ತ ಟೆಂಡರ್ (Open Tender) ಕರೆಯಲು ತೀರ್ಮಾನಿಸಲಾಗಿದೆ.
ಈ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಬಿಡ್‌ದಾರರು, ಆಹಾರ ಧಾನ್ಯವನ್ನು ಸರಬರಾಜು ಮಾಡುವವರೆಗೆ ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು 5 ಕೆ.ಜಿ. ಆಹಾರ ಧಾನ್ಯದ ಬದಲಾಗಿ ಪ್ರತಿ ಕೆ.ಜಿ.ಗೆ ರೂ.34ರಂತೆ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಹಣ ವರ್ಗಾಯಿಸಲು ತೀರ್ಮಾನವಾಗಿದೆ.
ಇದನ್ನೂ ಓದಿ: FCI: ಇ-ಹರಾಜು ಮೂಲಕ ಮಾತ್ರ ಅಕ್ಕಿ, ಗೋಧಿ ಮಾರಾಟ- ಎಫ್ಸಿಐಗೆ ಕೇಂದ್ರ ಸರ್ಕಾರ ಸೂಚನೆ