ಬೆಂಗಳೂರು: ಎರಡನೇ ಅಲೆಯ ಕೋವಿಡ್ ಪೊಲೀಸ್ ಇಲಾಖೆಯಲ್ಲಿ ಮರಣ ಮೃದಂಗ ಬಾರಿಸುತ್ತಿದ್ದು, ಇದೀಗ ಕೊರೊನಾ ವಾರಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮತ್ತೊಬ್ಬ ಪೊಲೀಸ್ ಅಧಿಕಾರಿ ಸೋಂಕಿಗೆ ತುತ್ತಾಗಿದ್ದಾರೆ.
ಕೊರೊನಾ ದೃಢವಾದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಎಎಸ್ಐ 57 ವರ್ಷದ ನಂಜಪ್ಪ ಸಾವನ್ನಪ್ಪಿದ್ದಾರೆ. ಪೊಲೀಸ್ ಅಧಿಕಾರಿ ನಂಜಪ್ಪ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದ ಇವರು, ಕೊರೊನಾ ಪರೀಕ್ಷೆಗೊಳಪಟ್ಟಿದ್ದರು. ವರದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ದೇವನಹಳ್ಳಿ ಆಕಾಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ರು.
ಉಸಿರಾಟದ ಸಮಸ್ಯೆ ಹೆಚ್ಚಾಗಿದ್ದರಿಂದ ಚಿಕಿತ್ಸೆ ಫಲಿಸದೆ ನಂಜಪ್ಪ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ನಿನ್ನೆಯಷ್ಟೇ ಸುಬ್ರಹ್ಮಣ್ಯನಗರ ಸಬ್ ಇನ್ಸ್ಪೆಕ್ಟರ್ ಕೊವಿಡ್‌ಗೆ ಬಲಿಯಾಗಿದ್ದರು. ಇದುವರೆಗೂ 9 ಜನ ಪೊಲೀಸರು ಕೋವಿಡ್ನಿಂದ ಸಾವನ್ನಪ್ಪಿದ್ದಾರೆ. ಈ ಘಟನೆಯಿಂದಾಗಿ ಈಗ ಪೊಲೀಸ್ ಇಲಾಖೆಯಲ್ಲಿ ಆತಂಕ ಹೆಚ್ಚಾಗಿದೆ.