ಬೆಂಗಳೂರು: ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನವನ್ನು ನಾಶಗೊಳಿಸಿ ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ. ಈ ಬಗ್ಗೆ ಎಚ್ಚರ ಮತ್ತು ಜಾಗೃತಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ವಿಧಾನಸೌಧದಲ್ಲಿ ಆಯೋಜಿಸಿದ್ದ ಭಾರತದ ಸಂವಿಧಾನ ಪೀಠಿಕೆಯ ಜಾಗತಿಕ ವಾಚನ ಕಾರ್ಯಕ್ರಮವನ್ನು ಸಂವಿಧಾನ ಪೀಠಿಕೆ ಓದುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಸಂವಿಧಾನದ ನಾಶ ಮತ್ತು ಮನುಸ್ಮೃತಿಯ ಜಾರಿ ಎಂದರೆ ಶೇ. 90ರಷ್ಟು ಭಾರತೀಯರನ್ನು ಮತ್ತೆ ಗುಲಾಮಗಿರಿಗೆ ತಳ್ಳುವುದಾಗಿದೆ. ಇದಕ್ಕಾಗಿ ಬಹಳ ಕುತಂತ್ರಗಳು ನಡೆಯುತ್ತಿವೆ. We the people of India ಎನ್ನುವ ಮೂಲಕವೇ ನಮ್ಮ ಸಂವಿಧಾನ ತೆರೆದುಕೊಳ್ಳುತ್ತದೆ. ಸಂವಿಧಾನದ ಆಶಯಗಳನ್ನು ಪರಿಣಾಮಕಾರಿಯಾಗಿ ಅರ್ಥೈಸಿಕೊಂಡು ಪಾಲಿಸದಿದ್ದರೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ. ಸಂವಿಧಾನದ ಸಮ ಸಮಾಜ ಮತ್ತು ಜಾತ್ಯಾತೀತ ತತ್ವದ ಆಶಯಗಳಂತೆಯೇ ನಮ್ಮ ಸರ್ಕಾರ ಸರ್ವರ ಏಳಿಗೆಯ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಜನರ ಹಣವನ್ನು ಮತ್ತೆ ಜನರ ಬದುಕಿಗೇ ಮರಳಿಸುವುದು ನಮ್ಮ ಕಾರ್ಯಕ್ರಮಗಳ ಉದ್ದೇಶವಾಗಿದೆ ಎಂದರು.
![Read Preamble of the Constitution](https://etvbharatimages.akamaized.net/etvbharat/prod-images/15-09-2023/19518244_meg.jpg)
ಸಂವಿಧಾನ ಜಾರಿಯಾದ ಬಳಿಕ ಭಾರತದಲ್ಲಿ ಅಧಿಕೃತವಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಾಯಿತು. ಬುದ್ಧ, ಬಸವ ಕಾಲದಿಂದಲೂ ಪ್ರಜಾಪ್ರಭುತ್ವ ವ್ಯವಸ್ಥೆ ನಮ್ಮ ನೆಲದಲ್ಲಿ ರೂಪುಗೊಂಡಿದೆ. ಸಂವಿಧಾನ ಜಾರಿ ಆಗುವ ಸಂದರ್ಭದಲ್ಲಿ ಪಾರ್ಲಿಮೆಂಟಿನಲ್ಲಿ ನಡೆದ ಚರ್ಚೆಗಳು ನಮ್ಮ ಸಂವಿಧಾನದ ಮಹತ್ವಕ್ಕೆ ಮತ್ತು ಸಂವಿಧಾನ ವಿರೋಧಿಗಳ ಮನಸ್ಥಿತಿಗೆ ಕನ್ನಡಿ ಹಿಡಿದಂತಿವೆ ಎಂದು ತಿಳಿಸಿದರು.
ಕಾರ್ಯಕ್ರದಮಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ, ಗೃಹ ಸಚಿವ ಜಿ. ಪರಮೇಶ್ವರ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಮುನಿಯಪ್ಪ ಸೇರಿದಂತೆ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
ಸಂವಿಧಾನ ಪೀಠಿಕೆ ಓದು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ವಿಧಾನಸೌಧದ ಮುಂಭಾಗ 'ಸಂವಿಧಾನ ಪೀಠಿಕೆ ಓದು' ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ರಾಜ್ಯ, ದೇಶ, ವಿದೇಶಗಳಿಂದ 2.27 ಕೋಟಿ ಜನರು ನೋಂದಣಿ ಮಾಡಿಕೊಂಡಿದ್ದಾರೆ. ಗ್ರಾಮ ಪಂಚಾಯಿತಿಯಿಂದ ಹಿಡಿದು ಸಚಿವಾಲಯದವರೆಗಿನ ಎಲ್ಲ ಕಚೇರಿಗಳಲ್ಲಿ ಸಂವಿಧಾನ ಪೀಠಿಕೆ ಓದು ನಡೆಯಿತು.
ಸಂಘ- ಸಂಸ್ಥೆಗಳು, ಕಂಪನಿಗಳು, ಬಹುರಾಷ್ಟ್ರೀಯ ಕಂಪನಿಗಳು, ಸರ್ಕಾರಿ ಇಲಾಖೆಗಳು, ಬ್ಯಾಂಕ್‌ಗಳು ಕೂಡ ನೋಂದಣಿ ಮಾಡಿಕೊಂಡಿದ್ದು, ಅವರೆಲ್ಲ ತಾವಿರುವ ಸ್ಥಳದಲ್ಲೇ ಸಂವಿಧಾನ ಪೀಠಿಕೆ ಓದಲಿದ್ದಾರೆ. ಪ್ರತಿ ಜಿಲ್ಲೆಯಲ್ಲೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.