ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧುಗೊಳಿಸುವಂತೆ ಕೋರಿ ಮಾಜಿ ಸಚಿವ ಎ. ಮಂಜು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.
ಆಸ್ತಿ ಸಂಬಂಧ ಸುಳ್ಳು ದಾಖಲೆಗಳನ್ನು ಸಲ್ಲಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಪರಾಜಿತ ಅಭ್ಯರ್ಥಿ ಎ. ಮಂಜು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ಇಂದು ನಡೆಯಿತು. ಈ ವೇಳೆ ಕಾಯ್ದಿರಿಸಿದ್ದ ಆದೇಶವನ್ನು ಏಕಸದಸ್ಯ ಪೀಠ ಶುಕ್ರವಾರ ಪ್ರಕಟಿಸಿದೆ. ತಾಂತ್ರಿಕ ಕಾರಣಗಳಿಗಾಗಿ ಅರ್ಜಿ ವಜಾ ಗೊಳಿಸಲಾಗುತ್ತಿದೆ ಎಂದು ತಿಳಿಸಿದೆ.
ಅರ್ಜಿದಾರರು ಆರೋಪಗಳಿಗೆ ಸಂಬಂಧಿಸಿದಂತೆ ಫಾರಂ ನಂ.25ರಲ್ಲಿ ಚುನಾವಣಾ ನಡವಳಿಕೆ ನಿಯಮ 94 (ಎ) ಅಡಿ ಪ್ರಮಾಣ ಪತ್ರ ಸಲ್ಲಿಸಬೇಕಿತ್ತು. ಆದರೆ ನಿಗದಿತ ರೀತಿಯಲ್ಲಿ ಪ್ರಮಾಣ ಪತ್ರ ಸಲ್ಲಿಸಿಲ್ಲ. ಹೀಗಾಗಿ ಸಲ್ಲಿಸಿರುವ ಇದು ಪೂರ್ಣ ಪ್ರಮಾಣದ ಚುನಾವಣಾ ತಕರಾರು ಅರ್ಜಿ ಆಗುವುದಿಲ್ಲ. ಹೀಗಾಗಿ ಜನಪ್ರತಿನಿಧಿ ಕಾಯ್ದೆ1951ರ ಕಲಂ 86 1ರ ಅಡಿಯಲ್ಲಿ ಅರ್ಜಿ ವಜಾ ಮಾಡಲಾಗಿದೆ ಎಂದು ಪೀಠ ಆದೇಶದಲ್ಲಿ ವಿವರಿಸಿದೆ.