ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗಕ್ಕೆ ಸದಸ್ಯರು ಮತ್ತು ಅಧ್ಯಕ್ಷರನ್ನು ನೇಮಕ ಮಾಡಲು ಅಭ್ಯರ್ಥಿಗಳ ಹೆಸರು ಶಿಫಾರಸು ಮಾಡುವ ಶೋಧನಾ ಸಮಿತಿ ರಚಿಸದೆ ಸದಸ್ಯರನ್ನು ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಈ ಕುರಿತು ಸಾಮಾಜಿಕ ಕಾರ್ಯಕರ್ತ ಟಿ ನರಸಿಂಹಮೂರ್ತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠ ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತ ಸುಧಾರಣೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿತು. ಅಲ್ಲದೆ ಶೋಧನಾ ಸಮಿತಿ ರಚನೆ ಮಾಡಿ ಸದಸ್ಯರನ್ನು ನೇಮಕ ಮಾಡಲಾಗಿದೆ ಎಂಬುದರ ಬಗ್ಗೆ ವಿವರಣೆ ನೀಡಿ ಪ್ರಮಾಣಪತ್ರ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆಯನ್ನು ಡಿಸೆಂಬರ್ 15ಕ್ಕೆ ಮುಂದೂಡಿತು.
ಅರ್ಜಿದಾರರ ಕೋರಿಕೆ:
ಕರ್ನಾಟಕ ಲೋಕಸೇವಾ ಆಯೋಗಕ್ಕೆ ಸದಸ್ಯರನ್ನು ನೇಮಕ ಮಾಡಲು ನಿಯಮಗಳನ್ನು ರೂಪಿಸಬೇಕು. ಅಲ್ಲಿಯವರೆಗೂ ಸಮಿತಿ ಶಿಫಾರಸ್ಸು ಅನುಸಾರ ಸದಸ್ಯರ ನೇಮಕಾತಿ ನಡೆಸಬೇಕು ಎಂದು ರಾಜ್ಯ ಸರ್ಕಾರ ಮತ್ತು ಕೆಪಿಎಸ್ಸಿಗೆ ಪ್ರಕರಣವೊಂದರ ವಿಚಾರಣೆ ವೇಳೆ ಹೈಕೋರ್ಟ್ ನಿರ್ದೇಶನ ನೀಡಿತ್ತು. ಆದರೆ, ರಾಜ್ಯ ಸರ್ಕಾರ ಶೋಧನಾ ಸಮಿತಿ ರಚನೆ ಮಾಡದೆ ಕೆಪಿಎಸ್ಸಿಗೆ ಸದಸ್ಯರನ್ನು ನೇಮಕ ಮಾಡಿದೆ. ಇದೇ ಧೋರಣೆಯನ್ನು ಹಲವು ವರ್ಷಗಳಿಂದ ರಾಜ್ಯ ಸರ್ಕಾರ ಅನುಸರಿಸಿಕೊಂಡು ಬರುತ್ತಿದೆ. ಆದ್ದರಿಂದ ಶೋಧನಾ ಸಮಿತಿ ರಚಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಹಾಗೂ ಅಲ್ಲಿವರೆಗೂ ಕೆಪಿಎಸ್ಸಿಗೆ ಸದಸ್ಯರನ್ನು ನೇಮಕ ಮಾಡಿ ಹೊರಡಿಸಿರುವ ಆದೇಶ ವನ್ನು ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದರು.