ಬೆಂಗಳೂರು: ಚಿತ್ರದುರ್ಗದ ಜಗದ್ಗುರು ಮುರುಘರಾಜೇಂದ್ರ (ಎಸ್‌ಜೆಎಂ) ಬೃಹನ್ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಸಂವಿಧಾನ ಬಾಹಿರ ಎಂದು ಮಠದ ಪರ ವಕೀಲರು ಗುರುವಾರ ಹೈಕೋರ್ಟ್‌ನಲ್ಲಿ ಪ್ರತಿಪಾದಿಸಿದರು. ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ ಅವರನ್ನು ಮರುಘಾ ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಹೊರಡಿಸಿದ ಆದೇಶವನ್ನು ರದ್ದುಪಡಿಸುವಂತೆ ಕೋರಿ ಎಸ್‌ಜೆಎಂ ವಿದ್ಯಾಪೀಠದ ಅಧ್ಯಕ್ಷ ಹಾಗೂ ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಮತ್ತು ಭಕ್ತರು ಸಲ್ಲಿಸಿರುವ ಅರ್ಜಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನ್ಯಾಯಪೀಠ ಮುಂದೆ ಗುರುವಾರ ವಿಚಾರಣೆ ಬಂದಿತ್ತು.
ಅರ್ಜಿದಾರರ ಪರ ಹಿರಿಯ ವಕೀಲ ಜಯಕುಮಾರ್ ಎಸ್. ಪಾಟೀಲ್ ಅವರು, ಮುರುಘಾ ಮಠದ ಪೀಠಾಧಿಪತಿ ಡಾ. ಶಿವಮೂರ್ತಿ ಶರಣರು ಪೋಕ್ಸೋ ಪ್ರಕರಣ ಸಂಬಂಧ 2022ರ ಸೆಪ್ಟೆಂಬರ್ 1ರಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರು ಮಠದ ಪೀಠಾಧಿಪತಿ ಮತ್ತು ಟ್ರಸ್ಟ್ ಅಧ್ಯಕ್ಷರಾಗಿದ್ದಾರೆ. ಸದ್ಯ ಮಠದ ಉಸ್ತುವಾರಿಯನ್ನು ಬೇರೆಯವರಿಗೆ ವಹಿಸಿದ್ದಾರೆ. ಇದನ್ನೇ ಕಾರಣವಾಗಿಸಿಕೊಂಡು ಸರ್ಕಾರ ಆಡಳಿತಾಧಿಕಾರಿಯನ್ನು ನೇಮಿಸಿ ಮಠದ ಮೇಲೆ ಅಧಿಕಾರ ಚಲಾಯಿಸಿದೆ ಎಂದು ವಿವರಿಸಿದರು.
ಅಲ್ಲದೇ, ಒಂದೊಮ್ಮೆ ಮಠ ಮತ್ತು ಟ್ರಸ್ಟ್ ವ್ಯವಹಾರಗಳು ಸೂಕ್ತ ರೀತಿಯಲ್ಲಿ ನಡೆಯುತ್ತಿಲ್ಲ ಎಂದಾದರೆ ಸಿವಿಲ್ ಪ್ರಕ್ರಿಯಾ ಸಂಹಿತೆ-1908ರ (ಸಿಪಿಸಿ) ಸೆಕ್ಷನ್ 92ರ ಅನುಸಾರ ಪರಿಹಾರ ಪಡೆಯಲು ಮುಕ್ತ ಅವಕಾಶಗಳಿತ್ತು. ಅದು ಬಿಟ್ಟು ಏಕಾಏಕಿ ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿದೆ. ಇದು ಸಂವಿಧಾನಬಾಹಿರ ಎಂದು ತಿಳಿಸಿದರು.
ದಿನದ ಕಲಾಪದ ಅವಧಿ ಮುಕ್ತಾಯಗೊಂಡ ಕಾರಣ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು ಜನವರಿ 18ಕ್ಕೆ ಮುಂದೂಡಿತು.
ಚಿತ್ರದುರ್ಗ ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು, ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ ಹಿನ್ನೆಲೆಯಲ್ಲಿ ಮಠದ ಆಡಳಿತಾಧಿಕಾರಿಯನ್ನಾಗಿ ಪಿ.ಎಸ್. ವಸ್ತ್ರದ ಅವರನ್ನು ನೇಮಿಸಿ 2022ರ ಡಿಸೆಂಬರ್ 13ರಂದು ಸರ್ಕಾರ ಆದೇಶಿಸಿತ್ತು. ಅವರು 2022ರ ಡಿಸೆಂಬರ್ 15ರಂದು ಮಠದ ಅಧಿಕಾರ ಸ್ವೀಕರಿಸಿದ್ದರು.
ಘಟನೆಯ ಹಿನ್ನೆಲೆ: ಶಿವಮೂರ್ತಿ ಮುರುಘರು ಜೈಲು ಸೇರಿದ ಮೇಲೆ ಮಠದ ಆಡಳಿತ ಸರಿಯಾಗಿ ನಡೆಯುತ್ತಿಲ್ಲ. ಮಠಕ್ಕೆ ಸೇರಿದ ಹಲವು ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣೆಯನ್ನು ಸಮರ್ಪಕವಾಗಿ ನಡೆಸಲು ಸರಕಾರದಿಂದ ಆಡಳಿತಾಧಿಕಾರಿ ನೇಮಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಡಾ. ಮಧು ಅರ್ಜಿ ಸಲ್ಲಿಸಿದ್ದರು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿತ್ರದುರ್ಗ ಜಿಲ್ಲಾಧಿಕಾರಿಗಳಿಗೆ ಮಠದ ಆಡಳಿತ ಮತ್ತು ಕಾರ್ಯನಿರ್ವಹಣೆ ಬಗ್ಗೆ ವರದಿ ಸಲ್ಲಿಸಲು ಆದೇಶಿಸಿದ್ದರು. ವಿದ್ಯಾಪೀಠದ ಅಡಿ ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಸುಮಾರು 106 ವಿದ್ಯಾಸಂಸ್ಥೆ ಕಾರ್ಯ ನಿರ್ವಹಿಸುತ್ತಿದೆ.
ಜನವರಿ 2 ರಂದು ಡಿಎಸ್ ಮಲ್ಲಿಕಾರ್ಜುನ್ ಸೇರಿದಂತೆ ಮೂವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ಅರ್ಜಿ ವಿಚಾರಣೆ ನಡೆಸಿದ್ದರು, ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಹಿಂದೂ ಕಾನೂನಿನ ಅಡಿ ಪೀಠಾಧಿಪತಿಗಳ ಅಧಿಕಾರ, ವ್ಯಾಪ್ತಿ ಸಂಬಂಧಿಸಿದಂತೆ ಹಲವು ಅಂಶಗಳನ್ನು ಅರ್ಜಿಯಲ್ಲಿ ಸೇರಿಸಬೇಕಾಗಿದೆ. ಈ ಹಿನ್ನೆಲೆ ಅರ್ಜಿಯ ತಿದ್ದಪಡಿಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದರು. ಮನವಿಯನ್ನು ಪುರಸ್ಕರಿಸಿದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ಸಂಪೂರ್ಣ ವಿವರವನ್ನು ಸಲ್ಲಿಸಲು ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿತು.
ಇದನ್ನೂ ಓದಿ: ಪಂಚಮಸಾಲಿಗರ 2 ಎ ಮೀಸಲು ಬೇಡಿಕೆ ವಿಚಾರ: ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್ ನಿರ್ದೇಶನ