ಬೆಂಗಳೂರು: ಶಾಲಾ-ಕಾಲೇಜು ಪ್ರಾರಂಭವಾದ ನಂತರ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ವಿಧಾನಸಭೆಯಲ್ಲಿ ಇಂದು ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಹರೀಶ್ ಪೂಂಜಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶೈಕ್ಷಣಿಕ ವರ್ಷ ಪ್ರಾರಂಭವಾದಾಗ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ನೇಮಕ ಮಾಡಿಕೊಳ್ಳಲಾದ ಅತಿಥಿ ಉಪನ್ಯಾಸಕರಿಗೆ ವೇತನ ಪಾವತಿಸಲಾಗಿದೆ ಎಂದರು.
ಇದಕ್ಕೂ ಮುನ್ನ ಶಾಸಕ ಹರೀಶ್ ಪೂಂಜಾ, ಕಳೆದ ಜುಲೈನಿಂದ ಆನ್‍ಲೈನ್ ತರಗತಿಗಳು ಪ್ರಾರಂಭವಾಗಿದ್ದು, ಅತಿಥಿ ಉಪನ್ಯಾಸಕರಿಗೆ ವೇತನವಿಲ್ಲದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬೇರೆ ಬೇರೆ ವೃತ್ತಿ ಅವಲಂಬಿಸಿದ್ದಾರೆ. ಕೂಲಿ ಕೆಲಸಕ್ಕೂ ಇಳಿಯುವಂತಾಗಿದೆ. ಈಗಾಗಲೇ ಪದವಿ ಕಾಲೇಜುಗಳ ಉಪನ್ಯಾಸಕರಿಗೆ ವೇತನ ಕೊಡಲಾಗಿದೆ. ಅದರಂತೆ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಿಗೂ ವೇತನ ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.