ಬೆಂಗಳೂರು: ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರ ಪಾಲಿಸದಿರುವುದು ಸೇರಿದಂತೆ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಸಾರ್ವಜನಿಕರಿಗೆ ದೂರು ಸಲ್ಲಿಸಲು ಅನುಕೂಲವಾಗುವಂತೆ ಮೂರು ದಿನಗಳಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ರಾಜ್ಯದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಲೆಟ್ಜ್ ಕಿಟ್ ಫೌಂಡೇಷನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
ಕೋವಿಡ್ ಮಾರ್ಗಸೂಚಿಗಳ ಉಲ್ಲಂಘನೆ ಮಾಡುವವರ ವಿರುದ್ಧ ಸಾರ್ವಜನಿಕರು ದೂರು ನೀಡಲು ಕುಂದು ಕೊರತೆ ಪರಿಹಾರ ವ್ಯವಸ್ಥೆ ರೂಪಿಸಬೇಕು. ಇ-ಮೇಲ್, ವಾಟ್ಸ್ಆ್ಯಪ್ ಹಾಗೂ ಇತರ ಮಾಧ್ಯಮಗಳ ಮೂಲಕ ದೂರು ಸಲ್ಲಿಸಲು ಅವಕಾಶ ಕಲ್ಪಿಸಬೇಕು. ಅಲ್ಲಿ ದಾಖಲಾಗುವ ದೂರುಗಳನ್ನು ಪರಿಶೀಲಿಸಿಲು ರಾಜ್ಯ ಮತ್ತು ಜಿಲ್ಲಾ ಮಟ್ಟದ ಸಮಿತಿಗಳನ್ನು ಸ್ಥಾಪಿಸಬೇಕು. ಈ ಸಂಬಂಧ ಮೂರು ದಿನಗಳಲ್ಲಿ ಅಧಿಸೂಚನೆ ಹೊರಡಿಸಿ ಕಾರ್ಯರೂಪಕ್ಕಿಳಿಸಬೇಕು. ಇಂತಹ ವ್ಯವಸ್ಥೆ ಆರಂಭಿಸಿದ ಬಗ್ಗೆ ಮಾಧ್ಯಮಗಳಲ್ಲಿ ವ್ಯಾಪಕ ಪ್ರಚಾರ ನೀಡಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶಿಸಿದೆ.
ಓದಿ: ಕಳ್ಳತನ ಮಾಡಿದ್ದನ್ನು ಪತ್ತೆ ಹಚ್ಚಿದ್ದಕ್ಕೆ ಕಾಡಿಗೆ ಬೆಂಕಿ ಇಟ್ಟನಂತೆ ಕಳ್ಳ: ಬಂಡೀಪುರದಲ್ಲಿ ಮೂವರ ಬಂಧನ!