ಬೆಂಗಳೂರು: ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಮಾಲೀಕನಿಗೆ 15 ಲಕ್ಷ ರೂಪಾಯಿ ಹಫ್ತಾ ನೀಡುವಂತೆ ಬೆದರಿಸಿದ ಆರೋಪದಡಿ ಮಾಜಿ ರೌಡಿಶೀಟರ್ ಹಾಗೂ ಬಿಜೆಪಿ ಮುಖಂಡನನ್ನು ಸಂಪಂಗಿರಾಮನಗರ ಪೊಲೀಸರು ಬಂಧಿಸಿದ್ದಾರೆ. ಸಂಪಂಗಿರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾಜಿ ರೌಡಿಶೀಟರ್ ಆಗಿರುವ ಅನಂದ್ ಬಂಧಿತ ಆರೋಪಿ. ರಾಜಸ್ಥಾನ ಮೂಲದ ಚೌಧರಿ ಎಂಬವರು ತನಗೆ 15 ಲಕ್ಷ ರೂ. ಹಫ್ತಾ ನೀಡುವಂತೆ ಕಳೆದ ಮೂರು ತಿಂಗಳಿನಿಂದಲೂ ಬೆದರಿಕೆ ಹಾಕುತ್ತಿರುವುದಾಗಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಆದೇಶದ ಮೇರೆಗೆ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಲಾಗಿದೆ. ಸಿಸಿಬಿ ರೌಡಿನಿಗ್ರಹ ದಳದ ಅಧಿಕಾರಿಗಳು ಆರೋಪಿಯನ್ನು ಪೊಲೀಸ್ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.
ಆನಂದ್ ವಿರುದ್ಧ 2005 ರಲ್ಲಿ ಸಂಪಂಗಿರಾಮನಗರ ಪೊಲೀಸ್ ಠಾಣೆಯಲ್ಲಿ ರೌಡಿಶೀಟ್ ತೆರೆಯಲಾಗಿತ್ತು. 2006ರಲ್ಲಿ ರೌಡಿಶೀಟ್ ಪಟ್ಟಿಯಿಂದ ಆತನ ಹೆಸರು ತೆಗೆದುಹಾಕಲಾಗಿತ್ತು. ರಿಯಲ್ ಎಸ್ಟೇಟ್ ಸೇರಿದಂತೆ ಹಲವು ವ್ಯವಹಾರಗಳಲ್ಲಿ ತೊಡಗಿಸಿಕೊಂಡಿದ್ದ ಆನಂದ್, ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ. ಕಳೆದ ಬಿಬಿಎಂಪಿ ಚುನಾವಣೆಯಲ್ಲಿ ಸಂಪಂಗಿರಾಮನಗರ ವಾರ್ಡ್ ನಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ.
ಕಮೀಷನರ್ ಸೂಚನೆ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. ಸಿಸಿಬಿಗೆ ಪ್ರಕರಣ ಹಸ್ತಾಂತರವಾಗಿದ್ದು, ಆರೋಪಿಯನ್ನ ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಮಗಳ ನಿಂದಿಸಿದ ಸ್ನೇಹಿತನ ಹತ್ಯೆ, ಆರೋಪಿ ಬಂಧನ