ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ಬಂಧಿಸುವಲ್ಲಿ ಪೂರ್ವ ವಿಭಾಗದ ಇಂದಿರಾನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೈಕಲ್ ಜಾನ್ಸನ್ ಬಂಧಿತ ಆರೋಪಿ. ಈತ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ. ಈ ಕುರಿತು ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.
ಇನ್ನು ಆರೋಪಿ ನೈಜೀರಿಯಾ ದೇಶದ ಪ್ರಜೆಯಾಗಿದ್ದು, ಬಿಸಿನೆಸ್ ವೀಸಾ ಅಡಿಯಲ್ಲಿ ಭಾರತಕ್ಕೆ ಬಂದು ಬೆಂಗಳೂರಿನ ಚಿಕ್ಕಪೇಟೆ ಬಳಿ ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದ. ಜೊತೆಗೆ ಮಾದಕ ವಸ್ತುಗಳನ್ನು ಖರೀದಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಈ ಸಂಬಂಧ ವಿದೇಶಿ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.