ಬೆಂಗಳೂರು: ಮಧ್ಯಾಹ್ನ 2 ಗಂಟೆಗೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪಚುನಾವಣೆ ಅಭ್ಯರ್ಥಿಗಳ ಕುರಿತು ಚರ್ಚೆ ನಡೆಸಲಾಗುತ್ತದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ದೆಹಲಿಯಿಂದ ಆಗಮಿಸಿದ ನಂತರ ಕುಮಾರಕೃಪಾ ಅತಿಥಿಗೃಹದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎರಡು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಹಾಗಾಗಿ ಎರಡೂ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕುರಿತು ಇಂದು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಈಗಾಗಲೇ ಕ್ಷೇತ್ರಗಳಿಗೆ ವೀಕ್ಷಕರನ್ನು ಕಳುಹಿಸಿ ಅಭಿಪ್ರಾಯ ಸಂಗ್ರಹಿಸಲಾಗಿದೆ ಎಂದರು.
ಉದಾಸಿ ಅವರ ಪತ್ನಿಗೆ ಟಿಕೆಟ್ ನೀಡುವ ಚರ್ಚೆ ನಡೆಯುತ್ತಿರುವ ಕುರಿತು ಪ್ರತಿಕ್ರಿಯಿಸಿದ ಸಿಂಗ್, ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಸಂಭಾವ್ಯ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿ ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿಕೊಡಲಾಗುತ್ತದೆ. ಪಕ್ಷದ ಅತ್ಯುನ್ನತ ಮಂಡಳಿಯಾದ ಕೇಂದ್ರ ಸಂಸದೀಯ ಮಂಡಳಿ ಸಭೆ ಅಂತಿಮ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಿದೆ.
ಈ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಜೊತೆ ಸರ್ಕಾರದ ಆಡಳಿತ ವೈಖರಿ ಕುರಿತು ಸಮಾಲೋಚನೆ ನಡೆಸಲಾಗುತ್ತದೆ. ಸದ್ಯ ಬೊಮ್ಮಾಯಿ ಉತ್ತಮ ಆಡಳಿತ ನೀಡುತ್ತಿದ್ದಾರೆ. ಯಾವ ರೀತಿ ಸರ್ಕಾರದ ಯೋಜನೆಗಳನ್ನು ಮನೆಬಾಗಿಲಿಗೆ ತಲುಪಿಸಬೇಕು, ಯೋಜನೆಗಳ ಕುರಿತು ಮಾಹಿತಿಯನ್ನು ಜನರಿಗೆ ಮುಟ್ಟಿಸಬೇಕು ಎನ್ನುವ ಕುರಿತು ಮಾತುಕತೆ ನಡೆಸಲಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ: ಐಷಾರಾಮಿ ಹಡಗಿನಲ್ಲಿ ರೇವ್ ಪಾರ್ಟಿ: ಬಾಲಿವುಡ್ 'ಸೂಪರ್ ಸ್ಟಾರ್' ಪುತ್ರ ಸೇರಿ ಹಲವರು ಎನ್‌ಸಿಬಿ ವಶಕ್ಕೆ