ಬೆಂಗಳೂರು: ಭೇಟಿಗೆ ಕಾಲಾವಕಾಶ ಕೋರಿದ್ದ 50 ಶಾಸಕರ ಜತೆ ಚರ್ಚಿಸಿದ್ದೇನೆ ಎಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ. ಅಲ್ಲದೆ, ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಖಡಕ್ ಎಚ್ಚರಿಕೆಯನ್ನೂ ನೀಡಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯಲ್ಲಿ 50ಕ್ಕೂ ಹೆಚ್ಚು ಶಾಸಕರ ಜೊತೆ ಸಭೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿ, ತಮ್ಮನ್ನು ಭೇಟಿಯಾದ ಶಾಸಕರು ಯಾವ ರೀತಿ ಕಾರ್ಯನಿರ್ವಹಿಸಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಪಡೆದಿದ್ದೇನೆ ಎಂದು ತಿಳಿಸಿದರು.
ಪರಿಸರ ಸಂರಕ್ಷಣೆ, ವಿಶ್ವ ಯೋಗ ದಿನಾಚರಣೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಭಿವೃದ್ಧಿ ಯೋಜನೆಗಳ ಜಾರಿ ವಿಚಾರದಲ್ಲಿ ಕೈಗೊಂಡಿರುವ ಕ್ರಮ, ಪ್ರತಿಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ನ ಕಾರ್ಯನಿರ್ವಹಣೆ ಯಾವ ರೀತಿ ಇದೆ ಎಂಬ ಮಾಹಿತಿ ಕೇಳಿ ತಿಳಿದುಕೊಂಡಿದ್ದೇನೆ. ಮುಂಬರುವ ದಿನಗಳಲ್ಲಿ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಕುರಿತು ಸಹ ಅವರಿಗೆ ಮಾಹಿತಿ ಒದಗಿಸಿದ್ದೇನೆ ಎಂದರು.
ಶಾಸಕರಿಗೆ ಎಲ್ಲಾ ಸಚಿವರ ಜೊತೆ ಸಮಾಲೋಚಿಸಲು ಅವಕಾಶ ಸಿಗುವಂತೆ ಮಾಡಲಾಗುತ್ತದೆ. ಪಕ್ಷದ ಎಲ್ಲಾ ಶಾಸಕರು ಹಾಗೂ ಕಾರ್ಯಕರ್ತರ ಕಾರ್ಯನಿರ್ವಹಣೆ ಬಗ್ಗೆ ಸಂತೃಪ್ತಿ ಇದೆ. ಪ್ರತಿಯೊಬ್ಬರೂ ಉತ್ತಮ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಪಕ್ಷದಲ್ಲಿ ಇಲ್ಲ ಎಂದು ಪುನರುಚ್ಚರಿಸಿದರು.
ನಾಯಕತ್ವ ಬದಲಾವಣೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿ, ಪಕ್ಷದಲ್ಲಿ ಕೆಲ ಸದಸ್ಯರು ಪಕ್ಷದ ವರ್ಚಸ್ಸು ಕಡಿಮೆಯಾಗುವ ರೀತಿಯಲ್ಲಿ ಕಾರ್ಯ ಮಾಡುತ್ತಿದ್ದಾರೆ. ಇಂಥವರ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಇತರೆ ನಾಯಕರು ನಿಗಾ ವಹಿಸಿದ್ದಾರೆ. ಯಾವ ರೀತಿಯ ಕ್ರಮ ಕೈಗೊಳ್ಳಬೇಕು ಎಂಬ ಕುರಿತು ಸಮಾಲೋಚಿಸಿದ್ದಾರೆ. ಪಕ್ಷದ ವಿರುದ್ಧ ಹೇಳಿಕೆ ನೀಡುತ್ತಿರುವ ಕೆಲ ನಾಯಕರು, ತಳಮಟ್ಟದಿಂದ ಕಾರ್ಯನಿರ್ವಹಿಸಿದ ಕಾರ್ಯಕರ್ತರಿಗೆ ಅಪಮಾನ ಮಾಡಿದ್ದಾರೆ.
ಎಲ್ಲೋ ಇಬ್ಬರು-ಮೂವರು ಪಕ್ಷದ ಮುಖಂಡರು ಪಕ್ಷ ವಿರೋಧಿ ಹೇಳಿಕೆ ನೀಡುವ ಮೂಲಕ ಕಾರ್ಯಕರ್ತರ ಶ್ರಮವನ್ನು ಕಡಿಮೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ. ಇವರ ಹೇಳಿಕೆಯ ಮಾಹಿತಿ ಹಾಗೂ ದಾಖಲೆಗಳನ್ನು ಸಂಗ್ರಹಿಸುತ್ತಿದ್ದೇವೆ. ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಅರುಣ್ ಸಿಂಗ್ ಹೇಳಿದ್ರು.
ಶಾಸಕ ಅರವಿಂದ್ ಬೆಲ್ಲದ್ ಫೋನ್ ಟ್ಯಾಪಿಂಗ್ ಆಗುತ್ತಿದೆ ಎಂಬ ಆರೋಪ ಮಾಡಿರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಮಾಹಿತಿ ಪಡೆದುಕೊಂಡು ಪ್ರತಿಕ್ರಿಯೆ ನೀಡುತ್ತೇನೆ ಎಂದರು.