ಬೆಂಗಳೂರು: ತಡರಾತ್ರಿ ಮನೆಗೆ ನುಗ್ಗಿ ಕೊಲೆ ಮಾಡಲು ಯತ್ನಿಸಿ ಪರಾರಿಯಾಗುತ್ತಿದ್ದ ಆರೋಪಿಯನ್ನು ಸ್ಥಳೀಯರು ಚೇಸ್ ಮಾಡಿ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಯಶವಂತಪುರ ಠಾಣಾ ವ್ಯಾಪ್ತಿಯ ಸುಬೇಧಾರ್ ಮಸೀದಿ ಬಳಿ ನಡೆದಿದೆ.
![huliyappa](https://etvbharatimages.akamaized.net/etvbharat/prod-images/8867312_bng.jpg)
ಹುಲಿಯಪ್ಪ ಎಂಬುವರ ಕೊಲೆ ಯತ್ನ ನಡೆದಿದ್ದು, ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿವೃತ್ತ ಶಿಕ್ಷಕರಾಗಿರುವ ಹುಲಿಯಪ್ಪ ಅವರ ಮನೆಗೆ ನುಗ್ಗಿದ ಆರೋಪಿಗಳು ಚಾಕುವಿನಿಂದ ಕುತ್ತಿಗೆ ಕೊಯ್ದು ಪರಾರಿಯಾಗಲು ಯತ್ನಿಸಿದ್ದಾರೆ. ಅಷ್ಟೊತ್ತಿಗಾಗಲೇ ಕೊಲೆ ಯತ್ನದ ವಿಷಯವನ್ನರಿತ ಸ್ಥಳೀಯರು ಅವರನ್ನು ಚೇಸ್ ಮಾಡಿ ಇಬ್ಬರು ಆರೋಪಿಗಳ ಪೈಕಿ ಓರ್ವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಘಟನೆ ಸಂಬಂಧ ಸ್ಥಳಕ್ಕೆ ಉತ್ತರ ವಿಭಾಗದ ಡಿಸಿಪಿ ಧರ್ಮೇಂದರ್ ಕುಮಾರ್ ಮೀನಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳು ಈ ಕೃತ್ಯ ಎಸಗಲು ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿಯನ್ನು ವಿಚಾರಣೆಗೊಳಪಡಿಸಿದಾಗ ಸತ್ಯ ಬಹಿರಂಗವಾಗಲಿದೆ. ಈ ಕುರಿತು ಯಶವಂತಪುರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.