ಬೆಂಗಳೂರು : ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಸಿಎಂ ಯಡಿಯೂರಪ್ಪ ಆನ್‌ಲೈನ್ ಮೂಲಕ ಚಾಲನೆ ನೀಡಿದರು. ಜೊತೆಗೆ ರಾಷ್ಟ್ರೀಯ ಹೆದ್ದಾರಿ ವಿಭಾಗೀಯ ಕಚೇರಿಯ ಉದ್ಘಾಟನೆಯನ್ನು ನೆರವೇರಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ, ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಶಿವಮೊಗ್ಗದಿಂದ 12 ಕಿ.ಮೀ ದೂರದಲ್ಲಿರುವ ಸೋಗಾನೆ ಹಳ್ಳಿ ಬಳಿ ನೂತನ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ. 220 ಕೋಟಿ ರೂ. ವೆಚ್ಚದಲ್ಲಿ ಇದು ಪೂರ್ಣಗೊಳ್ಳಲಿದೆ. ವಿಮಾನ ನಿಲ್ದಾಣಕ್ಕೆ 662.38 ಎಕರೆ ಜಮೀನನ್ನು ಈಗಾಗಲೇ ಸ್ವಾಧೀನಪಡಿಸಿಕೊಳ್ಳಲಾಗಿದೆ. ಅಲ್ಲದೇ ಹೆಚ್ಚುವರಿ 108 ಎಕರೆ ಜಮೀನು ಸ್ವಾಧೀನ ಹಂತದಲ್ಲಿದೆ. ರನ್ ವೇ ಸುಮಾರು 3 ಸಾವಿರ ಮೀಟರ್ ಇರಲಿದೆ. 18 ತಿಂಗಳಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಮುಗಿಯುವ ನಿರೀಕ್ಷೆ ಇದೆ.