ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಜಾಲ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.
ಪ್ರಕರಣದಲ್ಲಿ ಜಾಮೀನು ಕೋರಿ ಸಂಜನಾ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕ ಸದಸ್ಯ ಪೀಠ ವಿಚಾರಣೆ ನಡೆಸಿತು. ಕೆಲಕಾಲ ಅರ್ಜಿದಾರರ ಪರ ವಾದಿಸಿದ ಪೀಠ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಹಾಗೂ ಕಾಟನ್ ಪೇಟೆ ಠಾಣೆ ಪೊಲೀಸರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಅಕ್ಟೋಬರ್ 20ಕ್ಕೆ ಮುಂದೂಡಿತು.
ಅರ್ಜಿದಾರರ ಕೋರಿಕೆ:
ಪ್ರಕರಣ ಸಂಬಂಧ ತಮ್ಮ ವಿರುದ್ಧ ಮಾಡಿರುವ ಯಾವುದೇ ಆರೋಪಕ್ಕೆ ಸಾಕ್ಷ್ಯಾಧಾರ ಅಥವಾ ದಾಖಲೆ ಇಲ್ಲ. ದೂರುದಾರರು ಸಲ್ಲಿಸಿರುವ ಎಫ್ಐಆರ್ನಲ್ಲಿ ತಮ್ಮ ಹೆಸರು ನಮೂದಿಸಿಲ್ಲ. ಪೊಲೀಸರ ವಿಚಾರಣೆಯಲ್ಲಿ ಹಾಗೂ ಮನೆಯನ್ನು ಶೋಧಿಸಿದ ಸಂದರ್ಭದಲ್ಲಿ ಯಾವುದೇ ಮಾಹಿತಿ ಅಥವಾ ಮಾದಕ ವಸ್ತು ಲಭ್ಯವಾಗಿಲ್ಲ. ಯಾವುದೇ ಪುರಾವೆ ಇಲ್ಲದಿದ್ದರೂ ಪೊಲೀಸರು ತಮ್ಮನ್ನು ಬಂಧಿಸಿರುವುದು ಹಾಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದು ಕಾನೂನು ಸಮ್ಮತವಲ್ಲ. ಆದ್ದರಿಂದ ಜಾಮೀನು ಮಂಜೂರು ಮಾಡಬೇಕು ಎಂದು ನಟಿ ಸಂಜನಾ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.