ಬೆಂಗಳೂರು: ನಗರದ ಸಾರಾಯಿಪಾಳ್ಯದಲ್ಲಿ ಕೊರೊನಾ ತಡೆ ಮತ್ತು ನಿಯಂತ್ರಣ ಕರ್ತವ್ಯದಲ್ಲಿದ್ದ ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಸಿದ್ದ ಆರೋಪದಡಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
ಪ್ರಕರಣದ ಆರೋಪಿಗಳಾದ ಸರ್ರಾಜ್ ಹಾಗೂ ಅನ್ಸಾರ್ ಎಂಬುವವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎನ್.ಕೆ.ಸುಧೀಂದ್ರರಾವ್ ಅವರಿದ್ದ ಪೀಠ ವಿಚಾರಣೆ ನಡೆಸಿತು. ಕೆಲಕಾಲ ಆರೋಪಿಗಳ ಪರ ವಕೀಲರ ವಾದ ಆಲಿಸಿದ ಪೀಠ, ಷರತ್ತುಬದ್ಧ ಜಾಮೀನು ಮಂಜೂರು ಮಾಡಿತು.
ಆರೋಪಿಗಳು ತಲಾ 1 ಲಕ್ಷ ರೂಪಾಯಿ ಮೌಲ್ಯದ ಬಾಂಡ್, ಅಷ್ಟೇ ಮೊತ್ತಕ್ಕೆ ಒಬ್ಬರ ಶ್ಯೂರಿಟಿ ಒದಗಿಸಬೇಕು. ಸಾಕ್ಷ್ಯ ನಾಶಪಡಿಸಬಾರದು, ವಿಚಾರಣಾ ನ್ಯಾಯಾಲಯದ ಅನುಮತಿ ಇಲ್ಲದೆ ವ್ಯಾಪ್ತಿ ಬಿಟ್ಟು ಹೊರಗೆ ಹೋಗಬಾರದು. ತನಿಖಾಧಿಕಾರಿಗಳು ಸೂಚಿಸಿದಾಗ ವಿಚಾರಣೆಗೆ ಹಾಜರಾಗಬೇಕು. ಜಾಮೀನಿನ ಮೇಲೆ ಬಿಡುಗಡೆಯಾದ ತಕ್ಷಣ ವೈದ್ಯಕೀಯ ತಪಾಸಣೆಗೆ ಒಳಪಡಬೇಕು. ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲ ಎಂದಾದರೂ ತಮ್ಮ ಮನೆಯಲ್ಲೇ 14 ದಿನ ಕಡ್ಡಾಯವಾಗಿ ಕ್ವಾರಂಟೈನ್‌ಗೆ ಒಳಪಡಬೇಕು. ಲಾಕ್ಡೌನ್ ಮುಗಿಯುವವರೆಗೂ ಹೊರ ಬರಬಾರದು ಎಂಬ ಷರತ್ತುಗಳನ್ನು ವಿಧಿಸಿರುವ ಪೀಠ, ಆರೋಪಿಗಳಿಗೆ ಜಾಮೀನು ನೀಡಿದೆ.
ಅರ್ಜಿದಾರರ ಪರ ವಕೀಲರು, ಆರೋಪಿಗಳು ಏ. 2ರಿಂದ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಇದರಿಂದ ಅವರ ಕುಟುಂಬ ಸದಸ್ಯರು ತೊಂದರೆ ಅನುಭವಿಸುವಂತಾಗಿದೆ. ಮೇಲಾಗಿ ಅರ್ಜಿದಾರರು ಯಾವುದೇ ಕ್ರಿಮಿನಲ್ ಹಿನ್ನೆಲೆಯುಳ್ಳವರಲ್ಲ. ಕೋರ್ಟ್ ವಿಧಿಸುವ ಎಲ್ಲಾ ಷರತ್ತುಗಳಿಗೆ ಅವರು ಬದ್ಧರಾಗಿ ಇರಲು ಸಿದ್ಧರಿದ್ದಾರೆ. ಆದ್ದರಿಂದ ಜಾಮೀನು ಮಂಜೂರು ಮಾಡಬೇಕೆಂದು ನ್ಯಾಯಪೀಠಕ್ಕೆ ಮನವಿ ಮಾಡಿದ ಹಿನ್ನೆಲೆ ಜಾಮೀನು ನೀಡಲಾಗಿದೆ.