ಬೆಂಗಳೂರು : ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ನಿರಂತರವಾಗಿ ಮನವಿ ಸಲ್ಲಿಸಿದ್ದರೂ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ವಕೀಲರಿಗೆ ಪರಿಹಾರ ಕಲ್ಪಿಸಲು ಯಾವುದೇ ಪ್ಯಾಕೇಜ್ ಘೋಷಿಸದ ಹಿನ್ನೆಲೆಯಲ್ಲಿ ಬೆಂಗಳೂರು ವಕೀಲರ ಸಂಘ, ಜೂನ್ 22ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.
ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ ಪಿ ರಂಗನಾಥ್, ಪ್ರಧಾನ ಕಾರ್ಯದರ್ಶಿ ಎನ್ ಗಂಗಾಧರಯ್ಯ ಮತ್ತು ಖಜಾಂಚಿ ಶಿವಮೂರ್ತಿ ನೇತೃತ್ವದಲ್ಲಿ ನಡೆದ ಕಾರ್ಯಕಾರಿ ಸಮಿತಿ ಸದಸ್ಯರ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ಬೆಂಗಳೂರು ವಕೀಲರ ಸಂಘದ ಸದಸ್ಯರು ಹಾಗೂ ಪದಾಧಿಕಾರಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಹಾಗೂ ಮಾಸ್ಕ್ ಧರಿಸಿ 22ರ ಬೆಳಗ್ಗೆ 11ಗಂಟೆಗೆ ಹೈಕೋರ್ಟ್ ಗೋಲ್ಡನ್ ಗೇಟ್ ಮುಂಭಾಗ ಪ್ರತಿಭಟನೆ ನಡೆಸಿ, ಪರಿಹಾರಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲು ನಿರ್ಣಯಿಸಲಾಗಿದೆ. ಅಲ್ಲದೆ ಆ ದಿನ ರಾಜ್ಯದ ಎಲ್ಲಾ ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ಜಿಲ್ಲಾ ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಕರ್ನಾಟಕ ವಕೀಲರ ಪರಿಷತ್ ವಕೀಲರ ಕಲ್ಯಾಣ ನಿಧಿಯ ಕಲಂ 16ಕ್ಕೆ ತಿದ್ದುಪಡಿ ಮಾಡಿ ಅದನ್ನು ಆಧರಿಸಿ ಸರ್ಕಾರ ಸುಗ್ರೀವಾಜ್ಞೆ ಮೂಲಕ ಸಂಕಷ್ಟದಲ್ಲಿರುವ ವಕೀಲರಿಗೆ ಆರ್ಥಿಕ ನೆರವು ಕಲ್ಪಿಸಬೇಕು. ತುರ್ತಾಗಿ 50 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಹಿಂದೆ ಘೋಷಿಸಿರುವ ವಕೀಲರ ಆರೋಗ್ಯ ವಿಮಾ ಯೋಜನೆ ಜಾರಿಗೊಳಿಸಬೇಕು. ಎಲ್ಲಾ ವಕೀಲರಿಗೆ ಐದು ಲಕ್ಷದವರೆಗೆ ಬಡ್ಡಿ ರಹಿತ ಸಾಲ ನೀಡುವಂತೆ ಕೇಂದ್ರ ಸರ್ಕಾರವು ರಾಷ್ಟ್ರೀಕೃತ ಬ್ಯಾಂಕುಗಳಿಗೆ ನಿರ್ದೇಶಿಸಬೇಕೆಂದು ಪ್ರತಿಭಟನೆ ಮೂಲಕ ಒತ್ತಾಯಿಸಲು ವಕೀಲರ ಸಂಘ ಮುಂದಾಗಿದೆ.