ಬೆಂಗಳೂರು: ರಾಜಧಾನಿ ಬೆಂಗಳೂರು ವ್ಯಾಪ್ತಿ 28 ವಿಧಾನಸಭಾ ಕ್ಷೇತ್ರಗಳ ಮತದಾರರ ಕರಡು ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಈ ಸಂಬಂಧ ಯಾವುದೇ ರೀತಿಯ ತಿದ್ದುಪಡಿ, ಆಕ್ಷೇಪಣೆಗಳನ್ನು ಸಲ್ಲಿಸಲು ಡಿಸೆಂಬರ್ 9ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಇದರ ಜೊತೆಗೆ ಹೊಸ ಹೆಸರು ಸೇರ್ಪಡೆಗೆ ವಿಶೇಷ ಅಭಿಯಾನ ನಡೆಸಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್ ರಾಮಚಂದ್ರನ್ ತಿಳಿಸಿದ್ದಾರೆ.
ಬೆಂಗಳೂರು ವ್ಯಾಪ್ತಿ 28 ವಿಧಾನಸಭಾ ಕ್ಷೇತ್ರಗಳಲ್ಲಿ ಅಕ್ಟೋಬರ್ 27 ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಈ ಸಂಬಂಧ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 9ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಈ ಅವಧಿಯಲ್ಲಿ ವಿಶೇಷ ಮತದಾರರ ನೋಂದಣಿ ಅಭಿಯಾನಗಳನ್ನು ಬಿಬಿಎಂಪಿ ಎಲ್ಲ ಕಂದಾಯ ಅಧಿಕಾರಿಗಳು, ಸಹ ಕಂದಾಯ ಅಧಿಕಾರಿಗಳು, ವಾರ್ಡ್ ಕಚೇರಿಗಳು, ಮತಗಟ್ಟೆಗಳಲ್ಲಿ ಹಮ್ಮಿಕೊಂಡಿದ್ದು, ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಡು ಮತದಾರರ ಪಟ್ಟಿ ಬಿಡುಗಡೆ : ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ –2024 ರ ಕುರಿತು ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್. ರಾಮಚಂದ್ರನ್ ಅಕ್ಟೋಬರ್ 27 ರಂದು ಕರಡು ಮತದಾರರ ಪಟ್ಟಿ ಬಿಡುಗಡೆಗೊಳಿಸಿದ್ದರು. ಬೆಂಗಳೂರು ವ್ಯಾಪ್ತಿ ಬರುವ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಲ್ಲಿ ಪುರುಷ ಮತದಾರರು 50,61,883 ಜನ ಮಹಿಳಾ ಮತದಾರರು 47,26,856 ಮಂದಿ ಹಾಗೂ ಇತರೆ ಮತದಾರರು 1760 ಇದ್ದಾರೆ. ಒಟ್ಟು 97,09,499 ಮತದಾರರು ಇರುವ ಕರಡು ಪಟ್ಟಿಯನ್ನು ಬಿಡುಗಡೆಗೊಳಿಸಿದ್ದರು.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಕರಡು ಪ್ರತಿಯನ್ನು ಜಿಲ್ಲಾ ಚುನಾವಣಾಧಿಕಾರಿ-ಬೆಂಗಳೂರು ವ್ಯಾಪ್ತಿಯ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳ ಮತದಾರರ ನೊಂದಣಾಧಿಕಾರಿಗಳ ಕಚೇರಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿ ಹಾಗೂ ವಾರ್ಡ್ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ತಿದ್ದುಪಡಿ, ಆಕ್ಷೇಪಣೆಗೆ ಅವಕಾಶ ಕಲ್ಪಿಸಲಾಗಿದೆ.
ಈ ಹಿಂದೆ ಜಿಲ್ಲಾ ಚುನಾವಣಾಧಿಕಾರಿ -ಬೆಂಗಳೂರು ವ್ಯಾಪ್ತಿ 28 ವಿಧಾನಸಭಾ ಕ್ಷೇತ್ರಗಳಲ್ಲಿ 8615 ಮತಗಟ್ಟೆಗಳಿದ್ದು ಪ್ರಸ್ತುತ 8982 ಮತಗಟ್ಟೆಗಳಿವೆ. ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ 2024 ರ ಜನವರಿ 5 ರಂದು 'ಅಂತಿಮ ಮತದಾರರ ಪಟ್ಟಿ' ಪ್ರಕಟಿಸಲಾಗುತ್ತದೆ ಎಂದು ಅಂದು ಮಾಹಿತಿ ನೀಡಿದ್ದರು.
ಕರಡು ಮತದಾರರ ಪಟ್ಟಿಯನ್ನು CEO Karnataka website www.ceokarnataka.kar.nic.in website ಮತ್ತು ಬಿಬಿಎಂಪಿ www.bbmp.gov.inwebsite ನಲ್ಲಿ ಪರಿಶೀಲನೆ ಮಾಡಿಕೊಳ್ಳಬಹುದು. ಮತದಾರರು ಮೊಬೈಲ್ ಆ್ಯಪ್ Web Portal-Voters.eci.gov.in ಇದರಲ್ಲೂ ಮಾಹಿತಿಯನ್ನು ಖಾತರಿಪಡಿಸಿಕೊಳ್ಳಬಹುದು.
ಇದನ್ನೂಓದಿ:ಲೋಕಸಭೆ ಚುನಾವಣೆಗೆ ಸಿದ್ಧತೆ: ರಾಜ್ಯದಲ್ಲಿ ಮತದಾರರ ಸಂಖ್ಯೆ ಏರಿಕೆ; ಜ.5ಕ್ಕೆ ಅಂತಿಮ ಪಟ್ಟಿ ಪ್ರಕಟ